
ನವದೆಹಲಿ, 08 ಆಗಸ್ಟ್ (ಹಿ.ಸ.):
ಆ್ಯಂಕರ್:ಮಹಿಳೆಯರಿಗೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆ ಈಗಾಗಲೇ ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆ-2023ರ ಮೂಲಕ ಜಾರಿಗೊಂಡಿದೆ. ಆದರೆ ಅದನ್ನು ಅನುಷ್ಠಾನಗೊಳಿಸಲು ಕ್ಷೇತ್ರ ಪುನರ್‌ವಿಂಗಡಣೆ ಅಗತ್ಯವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಮಹಿಳಾ ಮೀಸಲಾತಿ ವಿಚಾರವಾಗಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಎಕ್ಸನಲ್ಲಿ ಪ್ರತಿಕ್ರಿಯಿಸಿರುವ ರಿಜಿಜು, ಜನಗಣತಿ ಅಂಕಿ-ಅಂಶಗಳು ಪ್ರಕಟವಾದ ಬಳಿಕ ಅದರ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ನಡೆಸಬೇಕಿದೆ. ಪ್ರಸ್ತುತ ಜನಗಣತಿ ಪ್ರಕ್ರಿಯೆ ಮುಂದುವರಿದಿದ್ದು, ಜಾತಿ ಆಧಾರಿತ ಜನಗಣತಿಯಿಂದ ಅಂಕಿ-ಅಂಶಗಳನ್ನು ಅಂತಿಮಗೊಳಿಸಲು ಹೆಚ್ಚಿನ ಸಮಯ ಬೇಕಾಗಬಹುದು ಎಂದು ತಿಳಿಸಿದ್ದಾರೆ.
ಇದರಿಂದ ಮಹಿಳಾ ಮೀಸಲಾತಿ ಜಾರಿಗೆ ವಿಳಂಬವಾಗುವ ಸಾಧ್ಯತೆಯಿದ್ದು, 2034ರ ಲೋಕಸಭಾ ಚುನಾವಣೆಗೂ ಮುನ್ನ ಜಾರಿಯಾಗದಿರಬಹುದು. 2029ರ ಚುನಾವಣೆಯಲ್ಲೇ ಮಹಿಳಾ ಮೀಸಲಾತಿ ಜಾರಿಗೆ ತರಬೇಕಾದರೆ, ಲಭ್ಯವಿರುವ ಇತ್ತೀಚಿನ ಜನಗಣತಿ ಅಂಕಿ-ಅಂಶಗಳ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಬೇಕು ಎಂದು ರಿಜಿಜು ಹೇಳಿದ್ದಾರೆ.
ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ವಿಧಾನವನ್ನು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ-2026ರಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ ಇದರೊಂದಿಗೆ ಮಂಡಿಸಲಾದ ಸಂವಿಧಾನದ 131ನೇ ತಿದ್ದುಪಡಿ ಮಸೂದೆ-2026 ಲೋಕಸಭೆಯಲ್ಲಿ ಅಂಗೀಕಾರವಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ರಾಹುಲ್ ಗಾಂಧಿ, ಮಹಿಳಾ ಮೀಸಲಾತಿ ಮಸೂದೆ 2023ರಲ್ಲೇ ಸರ್ವಾನುಮತದಿಂದ ಅಂಗೀಕಾರಗೊಂಡಿದ್ದು, ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿತ್ತು. ಮೂರು ವರ್ಷ ಕಳೆದರೂ ಅದನ್ನು ಏಕೆ ಜಾರಿಗೊಳಿಸಿಲ್ಲ ಮತ್ತು ಇದೀಗ ಕ್ಷೇತ್ರ ಪುನರ್‌ವಿಂಗಡಣೆಗೆ ಏಕೆ ಜೋಡಿಸಲಾಗುತ್ತಿದೆ ಎಂದು ಪ್ರಶ್ನಿಸಿದ್ದರು. 2023ರ ಕಾಯ್ದೆಯನ್ನು ಯಾವುದೇ ಷರತ್ತಿಲ್ಲದೆ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದರು.
ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಅವರಿಗೆ ಸಮಾನ ಅವಕಾಶ ಮತ್ತು ಸ್ವಾತಂತ್ರ್ಯ ನೀಡಬೇಕು. ಮಹಿಳೆಯರು ತಮ್ಮ ಸಂಪೂರ್ಣ ಸಾಮರ್ಥ್ಯದೊಂದಿಗೆ ಮುನ್ನಡೆಯದೆ ಯಾವುದೇ ದೇಶ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.