
ಬೆಂಗಳೂರು, 09 ಆಗಸ್ಟ್ (ಹಿ.ಸ.):
ಆ್ಯಂಕರ್:ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಮೂರು ದಿನಗಳ ‘ನಮ್ಮ ಭೂಮಿ, ನಮ್ಮ ಹಕ್ಕು’ ಪಾದಯಾತ್ರೆಗೆ ರಾಮನಗರ ತಾಲೂಕಿನ ಬೈರಮಂಗಲ ಗ್ರಾಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಚಾಲನೆ ನೀಡಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸಾಗಲಿದೆ. ಜೆಡಿಎಸ್‌ನ ಹೋರಾಟಕ್ಕೆ ಮೈತ್ರಿ ಪಕ್ಷ ಬಿಜೆಪಿ ನಾಯಕರು ಹಾಗೂ ಸಾವಿರಾರು ರೈತರು ಬೆಂಬಲ ಸೂಚಿಸಿದ್ದಾರೆ.
ಈ ವೇಳೆ ಮಾತನಾಡಿದ ಆರ್. ಅಶೋಕ್, ರೈತರನ್ನು ಎದುರು ಹಾಕಿಕೊಂಡಿರುವ ಯಾವುದೇ ಸರ್ಕಾರವೂ ಉಳಿದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ರೈತರ ಭೂಮಿಯನ್ನು ಕಸಿದುಕೊಳ್ಳಲು ಮುಂದಾಗಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.
ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಬಿಡದಿ ಟೌನ್‌ಶಿಪ್ ಯೋಜನೆ ರೈತರ ಮೇಲೆ ಮರಣ ಶಾಸನ ಬರೆಯುವಂತಿದೆ ಎಂದು ಆರೋಪಿಸಿದರು. ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ನಡೆಸುತ್ತಿಲ್ಲ; ರೈತರ ಭೂಮಿ ಮತ್ತು ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದರು. ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮಾರ್ಗದರ್ಶನವಿದೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.