
ಬಾಗಲಕೋಟೆ, 09 ಆಗಸ್ಟ್ (ಹಿ.ಸ.)
ಆ್ಯಂಕರ್ : ಮಕ್ಕಳಲ್ಲಿ ಕಾನೂನು ಅರಿವು ಮೂಡಿಸುವುದರಿಂದ ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ಜೊತೆಗೆ, ದೇಶದ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಕರ್ತವ್ಯಗಳನ್ನು ಪಾಲಿಸುವ ಅರಿವು ಇರಬೇಕು ಎಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದೇವೇಂದ್ರ ಪಂಡಿತ ಅವರು ಹೇಳಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳ
ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಹಾಗೂ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದೇವೇಂದ್ರ ಪಂಡಿತ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿಯೇ ಕಾನೂನಿನ ಮೂಲಭೂತ ಅಂಶಗಳನ್ನು ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ನೀಡಿದೆ. ಅದೇ ರೀತಿ ದೇಶದ ಏಕತೆ, ಅಖಂಡತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಜಾಗೃತರಾಗಬೇಕು. ಯಾವುದೇ ರೀತಿಯ ಅನ್ಯಾಯ ಅಥವಾ ಕಾನೂನುಬಾಹಿರ ಘಟನೆಗಳು ಎದುರಾದ ಸಂದರ್ಭದಲ್ಲಿ ಸೂಕ್ತ ಕಾನೂನು ನೆರವು ಪಡೆಯುವ ಮಾರ್ಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಮಾಜದ ಎಲ್ಲ ವರ್ಗದ ಜನರಿಗೆ ಉಚಿತ ಕಾನೂನು ನೆರವು ಲಭ್ಯವಿದ್ದು, ಆರ್ಥಿಕವಾಗಿ ಹಿಂದುಳಿದವರು ಹಾಗೂ ಅಗತ್ಯವಿರುವವರು ಕಾನೂನು ಸೇವಾ ಸಂಸ್ಥೆಗಳ ಸಹಾಯ ಪಡೆದುಕೊಳ್ಳಬಹುದು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ವಿಜಯಕುಮಾರ ಕುನ್ನೂರ, ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರಾದ ವಿವೇಕ ಗ್ರಾಮೋಪಾಧ್ಯ, ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಪ್ರದೀಶ ಪೋತದಾರ, ವಕೀಲರ ಸಂಘದ ತಾಲೂಕು ಅಧ್ಯಕ್ಷ ವಿ.ಡಿ. ಕತ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ, ಸಿಪಿಐ ಎಂ. ನಾಗರಡ್ಡಿ, ಸಹಾಯಕ ಸರ್ಕಾರಿ ವಕೀಲರಾದ ಕುಮಾರಿ ತೇಜಶ್ವಿನಿ ಮಠಪತಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎಂ. ಪಾಟೀಲ, ಶಾಲೆಯ ಮುಖ್ಯ ಶಿಕ್ಷಕ ವಿಜಯಕುಮಾರ ಜಮಖಂಡಿ, ನಿಲಯ ಪಾಲಕ ಅಶೋಕ ಬನ್ನೂರ ಸೇರಿದಂತೆ ನ್ಯಾಯಾಂಗ, ಪೊಲೀಸ್, ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಕೀಲರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಸತಿ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾನೂನು, ಸಂವಿಧಾನ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande