ಮತಗಳ್ಳತನದ ವಿರುದ್ಧ ಕ್ವಿಟ್ ವೋಟ್ ಚೋರಿ ಚಳವಳಿ ಅಗತ್ಯ: ಡಿ.ಕೆ. ಶಿವಕುಮಾರ್
ಬೆಂಗಳೂರು, 09 ಆಗಸ್ಟ್ (ಹಿ.ಸ.): ಆ್ಯಂಕರ್: ದೇಶದಲ್ಲಿ ಮತಗಳ್ಳತನ ನಡೆಯುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮತದಾನದ ಹಕ್ಕಿನ ರಕ್ಷಣೆಗಾಗಿ ‘ಕ್ವಿಟ್ ವೋಟ್ ಚೋರಿ’ ಚಳವಳಿ ನಡೆಸುವ ಅಗತ್ಯವಿದೆ ಎಂದು ಕರೆ ನೀಡಿದ್ದಾರೆ. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ನಡೆದ ಕ್ವಿ
ಡಿ.ಕೆ.ಶಿವಕುಮಾರ್


ಬೆಂಗಳೂರು, 09 ಆಗಸ್ಟ್ (ಹಿ.ಸ.):

ಆ್ಯಂಕರ್:

ದೇಶದಲ್ಲಿ ಮತಗಳ್ಳತನ ನಡೆಯುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮತದಾನದ ಹಕ್ಕಿನ ರಕ್ಷಣೆಗಾಗಿ ‘ಕ್ವಿಟ್ ವೋಟ್ ಚೋರಿ’ ಚಳವಳಿ ನಡೆಸುವ ಅಗತ್ಯವಿದೆ ಎಂದು ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ನಡೆದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನದ ಹಕ್ಕು ಬದುಕಿನ ಹಕ್ಕಿಗೆ ಸಮಾನವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮತವನ್ನು ರಕ್ಷಿಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೋಟ್ಯಂತರ ಮತದಾರರ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಕಾರ್ಯಕರ್ತರು ಹಾಗೂ ಮತಗಟ್ಟೆ ಮಟ್ಟದ ಏಜೆಂಟರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು. 18 ವರ್ಷ ತುಂಬಿದ ಯುವಕರು ನಮೂನೆ-6ರ ಮೂಲಕ ಮತದಾರರಾಗಿ ನೋಂದಾಯಿಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಜಗ್ಗಲ್ಲ, ಬಗ್ಗಲ್ಲ, ಕುಗ್ಗಲ್ಲ

ಕಾಂಗ್ರೆಸ್ ಪಕ್ಷ ಎಂದಿಗೂ ಜಗ್ಗುವುದಿಲ್ಲ, ಬಗ್ಗುವುದಿಲ್ಲ, ಕುಗ್ಗುವುದಿಲ್ಲ. ಕಾಂಗ್ರೆಸ್ ಪಕ್ಷದ ಇತಿಹಾಸವೇ ದೇಶದ ಇತಿಹಾಸ. ಪಕ್ಷವನ್ನು ದೇಶದಿಂದ ಮುಕ್ತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದರು.

ಸ್ವಾತಂತ್ರ್ಯ ಹೋರಾಟದ ಮೌಲ್ಯಗಳನ್ನು ಸ್ಮರಿಸಿದ ಅವರು, ಸಂವಿಧಾನವು ದೇಶದ ಜನರಿಗೆ ಅತ್ಯಂತ ಪವಿತ್ರವಾದ ಮಾರ್ಗದರ್ಶಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಹೋರಾಟ ಮುಂದುವರಿಸಬೇಕಿದೆ ಎಂದರು.

2028, 2029ರ ಗುರಿ

2028ರ ವಿಧಾನಸಭೆ ಹಾಗೂ 2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಬಲಪಡಿಸಲಾಗುವುದು. ಯುವಜನರನ್ನು ಸಂಘಟಿಸಿ ರಾಜ್ಯದಲ್ಲಿ ಹೊಸ ಶಕ್ತಿಯನ್ನು ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದರು.

10 ಸಾವಿರ ಯುವ ಸಂಘಗಳ ಸ್ಥಾಪನೆ

ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ‘ಭಾರತ ಜೋಡೋ ಯುವ ಶಕ್ತಿ ಸಂಘ’ಗಳನ್ನು ಸ್ಥಾಪಿಸಿ, ಒಟ್ಟು 10 ಸಾವಿರ ಸಂಘಗಳನ್ನು ರೂಪಿಸುವ ಉದ್ದೇಶವಿದೆ. 16ರಿಂದ 40 ವರ್ಷದ ಯುವಕರು ಸದಸ್ಯರಾಗಬಹುದಾಗಿದ್ದು, ಈ ತಿಂಗಳಲ್ಲೇ ನೋಂದಣಿ ಆರಂಭವಾಗಲಿದೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ನಾಯಕತ್ವ ಬೆಳೆಸುವ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು. ಇದಕ್ಕಾಗಿ ₹1,000 ಕೋಟಿ ಅನುದಾನ ಮೀಸಲಿಡುವ ಉದ್ದೇಶವಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ‘ಯುವ ಕರ್ನಾಟಕ’ದ ಮೂಲಕ ‘ನವ ಭಾರತ’ ನಿರ್ಮಿಸಬೇಕು ಎಂದು ಶಿವಕುಮಾರ್ ಕರೆ ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ 70 ವರ್ಷ ಮೇಲ್ಪಟ್ಟ 100 ಹಿರಿಯ ನಾಯಕರನ್ನು ಗುರುತಿಸಿ ಗೌರವಿಸಲು ನಿರ್ಧರಿಸಲಾಗಿದೆ. ರಾಜ್ಯದ ವಿವಿಧೆಡೆ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಿಸುವ ಯೋಜನೆಯೂ ರೂಪಿಸಲಾಗಿದೆ ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande