
ಗದಗ, 01 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ಶರಣಪ್ಪ ಜಾಲಿಹಾಳ (65) ಹಾಗೂ ಸುರೇಶ ತಳವಾರ (59) ಮೃತಪಟ್ಟಿದ್ದಾರೆ. ಇಬ್ಬರ ಸಾವಿನಿಂದ ಹೊಸಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಮೂಲಗಳ ಪ್ರಕಾರ, ಮಣ್ಣು ಸಾಗಾಟ ಮಾಡುತ್ತಿದ್ದ ಟಿಪ್ಪರ್ ರೋಣದಿಂದ ಗಜೇಂದ್ರಗಡ ಕಡೆಗೆ ತೆರಳುತ್ತಿತ್ತು. ಇದೇ ಸಂದರ್ಭದಲ್ಲಿ ಶರಣಪ್ಪ ಜಾಲಿಹಾಳ ಹಾಗೂ ಸುರೇಶ ತಳವಾರ ಅವರು ಬೈಕ್ನಲ್ಲಿ ಇಟಗಿ ಕ್ರಾಸ್ನಿಂದ ಹೊಸಳ್ಳಿ ಗ್ರಾಮದ ಕಡೆಗೆ ತೆರಳುತ್ತಿದ್ದರು. ಇಟಗಿ ಗ್ರಾಮದ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಟಿಪ್ಪರ್ ಅತಿವೇಗವಾಗಿ ಚಲಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಟಿಪ್ಪರ್ ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬೈಕ್ನಲ್ಲಿದ್ದ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಜೇಂದ್ರಗಡ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ಪರಿಶೀಲಿಸಿ, ಘಟನೆಯ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪರಾರಿಯಾಗಿರುವ ಟಿಪ್ಪರ್ ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅಪಘಾತದ ನಿಖರ ಕಾರಣ ಹಾಗೂ ಟಿಪ್ಪರ್ ವೇಗ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.
ಇಬ್ಬರು ಸವಾರರು ಅಪಘಾತದಲ್ಲಿ ಮೃತಪಟ್ಟಿರುವುದು ಹೊಸಳ್ಳಿ ಗ್ರಾಮಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP