
ವಿಜಯಪುರ, 01 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ರೌಡಿಶೀಟರ್ಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ 25 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ದಳದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯಲ್ಲಿ, ಬೆಳಗ್ಗೆ 4 ಗಂಟೆಯಿಂದ 8 ಗಂಟೆಯವರೆಗೆ ಒಟ್ಟು 482 ರೌಡಿಶೀಟರ್ಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು, ರೌಡಿಶೀಟರ್ಗಳ ಚಲನವಲನದ ಮೇಲೆ ನಿಗಾ ವಹಿಸುವುದು ಹಾಗೂ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿತ್ತು.
ಪರಿಶೀಲನೆ ವೇಳೆ ಹಲವು ಮಹತ್ವದ ಅಂಶಗಳು ಪೊಲೀಸರ ಗಮನಕ್ಕೆ ಬಂದಿವೆ. ದಾಖಲೆಗಳಿಲ್ಲದ ವಾಹನಗಳನ್ನು ಹೊಂದಿದ್ದ 12 ಮಂದಿಯನ್ನು ಪತ್ತೆಹಚ್ಚಲಾಗಿದೆ. ಅಲ್ಲದೆ, ಸಂಬಂಧವಿಲ್ಲದ ಆಸ್ತಿ ದಾಖಲೆಗಳು ಹಾಗೂ ಚೆಕ್ ಬುಕ್ ಗಳನ್ನು ಹೊಂದಿದ್ದ 6 ಮಂದಿಯ ಕುರಿತು ಕೂಡ ಮಾಹಿತಿ ಲಭ್ಯವಾಗಿದ್ದು, ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ, ಕಾನೂನುಬದ್ಧವಾಗಿ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿದ 13 ಮಂದಿ ಬಾಂಡ್ ಓವರ್ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಮತ್ತೊಂದೆಡೆ, 2 ಮಂದಿ ರೌಡಿಶೀಟರ್ಗಳ ವಿರುದ್ಧ ಜಾರಿಯಲ್ಲಿರುವ ಜಾಮೀನುರಹಿತ ಬಂಧನ ವಾರಂಟ್ಗಳು ಬಾಕಿ ಇರುವುದೂ ಪತ್ತೆಯಾಗಿದೆ.
ಅಪರಾಧ ಹಿನ್ನೆಲೆ ಹೊಂದಿರುವ ವ್ಯಕ್ತಿಗಳ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದ, 7 ಮಂದಿ ರೌಡಿಶೀಟರ್ಗಳ ಆಸ್ತಿ ಸಂಬಂಧಿತ ಮುಟ್ಟುಗೋಲು ಕ್ರಮಕ್ಕೂ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಯಾವುದೇ ರೀತಿಯ ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ವಿಶೇಷ ಕಾರ್ಯಾಚರಣೆಯ ಮೂಲಕ ಪೊಲೀಸ್ ಇಲಾಖೆ ನೀಡಿದೆ. ರೌಡಿಶೀಟರ್ಗಳು ಹಾಗೂ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮುಂದೆಯೂ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಎಸ್ಪಿ ಲಕ್ಷ್ಮಣ ಬಿ. ನಿಂಬರಗಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande