
ಬಳ್ಳಾರಿ, 01 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಸೆಪ್ಟೆಂಬರ್ 06 ರಂದು ಬೆಂಗಳೂರಿನಲ್ಲಿ ‘ವಿದೇಶದಲ್ಲಿ ಅಧ್ಯಯನ-2026’ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ ಗೇಟ್ ನಂ.4, ‘ಗಾಯತ್ರಿ ಗ್ರ್ಯಾಂಡ್'ನಲ್ಲಿ ಈ ಶೈಕ್ಷಣಿಕ ಮೇಳ ನಡೆಯಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನೇಮಕಾತಿ ಮತ್ತು ಶೈಕ್ಷಣಿಕ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ.
ವಿಶ್ವದ 10ಕ್ಕೂ ಹೆಚ್ಚು ಪ್ರಮುಖ ದೇಶಗಳ 75ಕ್ಕೂ ಅಧಿಕ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ವಿದೇಶಿ ಶಿಕ್ಷಣದ ಪ್ರವೇಶ ಪ್ರಕ್ರಿಯೆ, ಕಾಲೇಜುಗಳ ಆಯ್ಕೆ, ವಿದ್ಯಾರ್ಥಿ ವೀಸಾ ನಿಯಮಗಳು ಮತ್ತು ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಒಂದೇ ಸೂರಿನಡಿ ದೊರೆಯಲಿದೆ.
ಆಸಕ್ತ ವಿದ್ಯಾರ್ಥಿಗಳು ಅಧಿಕೃತ ಜಾಲತಾಣವಾದ https://studyabroad.ksdckarnataka.com ಮೂಲಕ ಸೆಪ್ಟೆಂಬರ್ 06 ರ ಸಂಜೆ 5 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದು.
ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಕನಸು ಹೊತ್ತಿರುವ ವಿದ್ಯಾರ್ಥಿಗಳು ಈ ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್