ಉದ್ಯಾನವನಗಳ ನಿರ್ವಹಣೆ ಹೆಸರಿನಲ್ಲಿ ಅನುದಾನ ದುರ್ಬಳಕೆ: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಎಚ್ಚರಿಕೆ
ಪಾರ್ಕ್ ನಿರ್ವಹಣೆ ಹಣ ಲೂಟಿ
krishna-byre-gowda-slams-officials-park-maintenance


ಬೆಂಗಳೂರು, 01 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ಉದ್ಯಾನವನಗಳ ನಿರ್ವಹಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರದ ಅನುದಾನ ದುರ್ಬಳಕೆಯಾಗುತ್ತಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಪಾರ್ಕ್‌ಗಳ ಅಭಿವೃದ್ಧಿಗೆ ಬಿಡುಗಡೆಯಾಗುತ್ತಿರುವ ಕೋಟ್ಯಂತರ ರೂಪಾಯಿ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

“ನೀವು ಕೆಲಸ ಮಾಡುವುದು ಸಾರ್ವಜನಿಕರ ಹಿತಾಸಕ್ತಿಗಾಗಿ ಅಥವಾ ಗುತ್ತಿಗೆದಾರರಿಗೆ ಹಣ ಮಾಡಿಕೊಡುವುದಕ್ಕಾಗಿಯೇ?” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಸರ್ಕಾರದ ಹಣ ದುರುಪಯೋಗಪಡಿಸಿಕೊಳ್ಳುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಇದರಿಂದ ಸಾರ್ವಜನಿಕರಿಗೆ ದೊರೆಯಬೇಕಾದ ಮೂಲಸೌಕರ್ಯಗಳು ವಂಚಿತವಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿಯಲ್ಲಿ ಕುಳಿತು ಕಡತಗಳಿಗೆ ಸಹಿ ಹಾಕುವುದಷ್ಟೇ ಅಧಿಕಾರಿಗಳ ಕೆಲಸವಲ್ಲ. ಖುದ್ದಾಗಿ ಸ್ಥಳಗಳಿಗೆ ಭೇಟಿ ನೀಡಿ ಪಾರ್ಕ್‌ಗಳ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಬೇಕು. ಕಾಮಗಾರಿ ಸಮರ್ಪಕವಾಗಿ ನಡೆಯದಿದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡುವ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande