ಜನಸೇವೆ, ಅಭಿವೃದ್ಧಿಯ ಸಂಕಲ್ಪದೊಂದಿಗೆ 100 ದಿನ: ಪರಮೇಶ್ವರ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಉಪಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡು ಇಂದಿಗೆ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದು ಹಾಗೂ ಜನಕೇಂದ್ರಿತ ಆಡಳಿತವನ್ನು ಬ
ಡಿಸಿಎಂ ಎಕ್ಸ್ ಪೋಸ್ಟ್


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಉಪಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡು ಇಂದಿಗೆ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದು ಹಾಗೂ ಜನಕೇಂದ್ರಿತ ಆಡಳಿತವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಅಧಿಕಾರವನ್ನು ಅವಕಾಶವಾಗಿ ಪರಿಗಣಿಸದೆ ಜನರ ಸೇವೆಯ ಜವಾಬ್ದಾರಿಯಾಗಿ ನೋಡಿಕೊಂಡಿದ್ದೇನೆ. ಪ್ರತಿಯೊಂದು ನಿರ್ಧಾರದಲ್ಲೂ ಜನರ ಕಲ್ಯಾಣವನ್ನು ಕೇಂದ್ರವಾಗಿಟ್ಟುಕೊಂಡು, ಜನರ ಹಿತಾಸಕ್ತಿಗೆ ಬದ್ಧವಾಗಿ ಕಾರ್ಯನಿರ್ವಹಿಸಲು ಪ್ರಯತ್ನಿಸಿದ್ದೇನೆ ಎಂದು ಹೇಳಿದ್ದಾರೆ.

ಜನಸ್ನೇಹಿ ಕಂದಾಯ ಆಡಳಿತಕ್ಕೆ ಒತ್ತು

ಕಂದಾಯ ಇಲಾಖೆಯಲ್ಲಿ ಸಾರ್ವಜನಿಕ ಸೇವೆಗಳನ್ನು ತ್ವರಿತ, ಪಾರದರ್ಶಕ ಹಾಗೂ ಸುಲಭವಾಗಿ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಾ.ಪರಮೇಶ್ವರ ತಿಳಿಸಿದ್ದಾರೆ.

ಭೂ ದಾಖಲೆಗಳು, ಅರ್ಜಿಗಳ ವಿಲೇವಾರಿ ಸೇರಿದಂತೆ ನಾಗರಿಕರ ದೈನಂದಿನ ಬದುಕಿಗೆ ನೇರವಾಗಿ ಸಂಬಂಧಿಸಿದ ಸಮಸ್ಯೆಗಳಿಗೆ ಆದ್ಯತೆ ನೀಡಲಾಗಿದೆ. ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸುವ ಮೂಲಕ ಆಡಳಿತವನ್ನು ಹೆಚ್ಚು ಸ್ಪಂದನಶೀಲ ಹಾಗೂ ಜನಸ್ನೇಹಿಯಾಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಕ್ರೀಡಾ ಕ್ಷೇತ್ರಕ್ಕೆ ಹೊಸ ಕಾರ್ಯಕ್ರಮಗಳು

ಕ್ರೀಡಾ ಕ್ಷೇತ್ರದಲ್ಲಿ ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು, ಕ್ರೀಡಾ ಮೂಲಸೌಕರ್ಯವನ್ನು ಬಲಪಡಿಸುವುದು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕವನ್ನು ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದು ಸರ್ಕಾರದ ಉದ್ದೇಶವಾಗಿದೆ. ಯುವಜನರ ಪ್ರತಿಭೆ ಹಾಗೂ ಸಾಮರ್ಥ್ಯಕ್ಕೆ ಬಲವಾದ ವೇದಿಕೆ ಕಲ್ಪಿಸುವುದರ ಜತೆಗೆ, ಆರೋಗ್ಯ, ಶಿಸ್ತು ಮತ್ತು ಸಾಧನೆಯ ಸಂಸ್ಕೃತಿಯಾಗಿ ಕ್ರೀಡೆಯನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಸಮಗ್ರ ಅಭಿವೃದ್ಧಿಗೆ ಆದ್ಯತೆ

ಅಭಿವೃದ್ಧಿ ಎಂದರೆ ಕೇವಲ ಯೋಜನೆಗಳು ಮತ್ತು ಮೂಲಸೌಕರ್ಯ ನಿರ್ಮಾಣವಲ್ಲ. ಅದು ಜನರ ಬದುಕಿನಲ್ಲಿ ತರುವ ಸಕಾರಾತ್ಮಕ ಬದಲಾವಣೆಯಾಗಿದೆ ಎಂದು ಡಾ.ಪರಮೇಶ್ವರ ಹೇಳಿದ್ದಾರೆ.

ಹೊಸ ಉಪಕ್ರಮಗಳು, ಉತ್ತಮ ಮೂಲಸೌಕರ್ಯ, ಯುವಜನರಿಗೆ ಉದ್ಯೋಗಾವಕಾಶಗಳು ಹಾಗೂ ರೈತರು ಮತ್ತು ಸಾಮಾನ್ಯ ನಾಗರಿಕರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಸ್ಪಂದಿಸುವುದು ಸಮಗ್ರ ಮತ್ತು ಎಲ್ಲರನ್ನು ಒಳಗೊಂಡ ಅಭಿವೃದ್ಧಿಯ ತಮ್ಮ ದೃಷ್ಟಿಕೋನದ ಪ್ರಮುಖ ಅಂಶಗಳಾಗಿವೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಜನರು ತಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಧನ್ಯವಾದ ಸಲ್ಲಿಸಿರುವ ಅವರು, ಜನರ ವಿಶ್ವಾಸವೇ ತಮ್ಮ ಶಕ್ತಿ. ಜನರ ನಿರೀಕ್ಷೆಗಳು ಮುಂದಿನ ಪ್ರತಿಯೊಂದು ಹೆಜ್ಜೆಯಲ್ಲೂ ತಮ್ಮನ್ನು ಮುನ್ನಡೆಸಲಿವೆ ಎಂದು ಹೇಳಿದ್ದಾರೆ.

“ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗಿದೆ. ಈ ಪಯಣವನ್ನು ನಾವೆಲ್ಲರೂ ಒಟ್ಟಾಗಿ ಮುಂದುವರಿಸೋಣ” ಎಂದು ಡಾ.ಜಿ.ಪರಮೇಶ್ವರ ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande