ದೃಢ ಕರ್ನಾಟಕದ ಸಂಕಲ್ಪ ಕಾರ್ಯಕ್ರಮ: ಹಲವು ಯೋಜನೆಗಳಿಗೆ ಚಾಲನೆ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:ರಾಜ್ಯ ಸರ್ಕಾರದ 100 ದಿನಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮದಲ್ಲಿ ಹಲವು ಜನಪರ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕ
ಚಾಲನೆ


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:ರಾಜ್ಯ ಸರ್ಕಾರದ 100 ದಿನಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮದಲ್ಲಿ ಹಲವು ಜನಪರ ಯೋಜನೆಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ನೀಡಿದರು. ‘ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ’ಗೆ ಡಾ. ಜಿ. ಪರಮೇಶ್ವರ ಚಾಲನೆ ನೀಡಿದರು.

ಗ್ರಾಮೀಣ ಭಾಗದ ನಿವೇಶನ ರಹಿತರಿಗೆ ಐದು ಲಕ್ಷ ನಿವೇಶನಗಳ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮಕ್ಕೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಹಿ ಮಾಡುವ ಮೂಲಕ ಡಾ. ಜಿ. ಪರಮೇಶ್ವರ ಚಾಲನೆ ನೀಡಿದರು.

ಸರ್ಕಾರದ 100 ದಿನಗಳ ಸಾಧನೆ ಹಾಗೂ ಮುಂದಿನ ಕಾರ್ಯಯೋಜನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭೀಕರ ಬರಗಾಲದ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಸಂಭ್ರಮಾಚರಣೆ ನಡೆಸದೆ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ. ಪರಮೇಶ್ವರ ತಿಳಿಸಿದರು.

ರಾಜ್ಯದಲ್ಲಿ ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಹಾಗೂ ನಿವೇಶನ ರಹಿತರಿಗೆ ನೆರವಾಗುವ ಹಲವು ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆಯ ಮೂಲಕ ಉಳುಮೆಯಾಗದೆ ಉಳಿದಿರುವ ಕೃಷಿ ಭೂಮಿಯನ್ನು ಉಳುಮೆ ಮಾಡಿಕೊಡಲು ಸರ್ಕಾರ ಮುಂದಾಗಿದೆ.

ಜನರ ಸಮಸ್ಯೆಗಳನ್ನು ಅವರ ಮನೆ ಬಾಗಿಲಲ್ಲೇ ಆಲಿಸಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಕಾರ್ಯಕ್ರಮ ಆರಂಭಿಸಲಾಗಿದ್ದು, ಸಚಿವರು ಮತ್ತು ಶಾಸಕರು ತಿಂಗಳಿಗೆ ಎರಡು ಬಾರಿ ಜನರ ಬಳಿಗೆ ತೆರಳಲಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯುವ ಉದ್ಯೋಗ ಸೇತು ಕಾರ್ಯಕ್ರಮವೂ ಚಾಲನೆಯಲ್ಲಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸುಮಾರು 10 ಸಾವಿರ ಭಾರತ್ ಜೋಡೊ ಸಂಘಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದ್ದು, ಇದಕ್ಕಾಗಿ 1,000 ಕೋಟಿ ರೂ. ಮೀಸಲಿಡಲಾಗಿದೆ. ಸಂಘಗಳ ಸದಸ್ಯತ್ವ ಆರಂಭಿಸಿದ ಒಂದು ವಾರದಲ್ಲೇ 7.3 ಲಕ್ಷ ಯುವಕರು ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ರಾಜ್ಯದ ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ‘ಕರ್ನಾಟಕ ಏರೋಸ್ಪೇಸ್ ನೀತಿ 2026–2031’, ‘ತೇಗ ಸಿರಿ ಯೋಜನೆ’, ಹೊಸ ಜವಳಿ ಮತ್ತು ಸಿದ್ಧ ಉಡುಪು ನೀತಿ 2026–31 ಹಾಗೂ ‘ಶ್ರಮಿಕ ನಿವಾಸ’ ಯೋಜನೆಗಳಿಗೂ ಅನುಮೋದನೆ ನೀಡಲಾಗಿದೆ.

ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ಪುನರಾರಂಭಿಸಲು ತೀರ್ಮಾನಿಸಲಾಗಿದ್ದು, ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ.

ಈ ಕಾರ್ಯಕ್ರಮವು ಸರ್ಕಾರದ 100 ದಿನಗಳ ಸಂಭ್ರಮಾಚರಣೆಯಷ್ಟೇ ಅಲ್ಲ. ಸರ್ಕಾರವನ್ನು ಟೀಕಿಸುತ್ತಿರುವ ವಿರೋಧ ಪಕ್ಷಗಳಿಗೆ ಅಭಿವೃದ್ಧಿ ಕಾರ್ಯಗಳ ಮೂಲಕ ಉತ್ತರ ನೀಡುವ ಕಾರ್ಯಕ್ರಮವಾಗಿದೆ. ಕರ್ನಾಟಕದ ಪ್ರಗತಿಯೇ ದೇಶದ ಪ್ರಗತಿ ಎಂದು ಡಾ. ಜಿ. ಪರಮೇಶ್ವರ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande