
ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಜರ್ಮನಿಯ ಚಾನ್ಸಲರ್ ಫ್ರೆಡ್ರಿಕ್ ಮರ್ಜ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಭಾರತ–ಜರ್ಮನಿ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.
ಮಾತುಕತೆಯಲ್ಲಿ ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಕ್ಷೇತ್ರ, ಸ್ವಚ್ಛ ಇಂಧನ, ಉನ್ನತ ತಂತ್ರಜ್ಞಾನ ಹಾಗೂ ಪ್ರತಿಭೆಗಳ ಮುಕ್ತ ಸಂಚಾರ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಕುರಿತು ಚರ್ಚಿಸಲಾಯಿತು.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ, ಭಾರತ ಮತ್ತು ಜರ್ಮನಿ ನಡುವಿನ ರಾಜತಾಂತ್ರಿಕ ಸಂಬಂಧಗಳು 75 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಉಭಯ ದೇಶಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚೆ ನಡೆದಿರುವುದಾಗಿ ತಿಳಿಸಿದರು.
ಜರ್ಮನಿಯೊಂದಿಗಿನ ಭಾರತದ ಪಾಲುದಾರಿಕೆಯ ವ್ಯಾಪ್ತಿ ನಿರಂತರವಾಗಿ ವಿಸ್ತರಿಸುತ್ತಿದೆ. ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಸಹಕಾರವನ್ನು ಮುಂದುವರಿಸುವುದು ಹಾಗೂ ಎರಡೂ ದೇಶಗಳ ಜನರ ಹಿತಾಸಕ್ತಿಗಾಗಿ ಹೊಸ ಅವಕಾಶಗಳನ್ನು ಅನ್ವೇಷಿಸುವ ಬಗ್ಗೆಯೂ ನಾಯಕರು ಚರ್ಚಿಸಿದರು.
ಯುರೋಪ್‌ನೊಂದಿಗೆ ಭಾರತದ ಸಂಪರ್ಕದಲ್ಲಿ ಜರ್ಮನಿ ಪ್ರಮುಖ ಆಧಾರಸ್ತಂಭವಾಗಿದೆ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸುವಲ್ಲಿ ಜರ್ಮನಿ ಭಾರತದ ಪ್ರಮುಖ ಹಾಗೂ ಮೌಲ್ಯಯುತ ಪಾಲುದಾರ ಎಂದು ಮೋದಿ ಹೇಳಿದ್ದಾರೆ.
ದೂರದೃಷ್ಟಿಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸಲು ಭಾರತ ಮತ್ತು ಜರ್ಮನಿ ಒಟ್ಟಾಗಿ ಕಾರ್ಯನಿರ್ವಹಿಸಲಿವೆ. ಉಭಯ ದೇಶಗಳ ನಡುವಿನ ಹೆಚ್ಚುತ್ತಿರುವ ಸಹಕಾರವು ಪರಸ್ಪರ ಸಮೃದ್ಧಿಯ ಜೊತೆಗೆ ಜಾಗತಿಕ ಮಟ್ಟದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಭಾರತ ಮತ್ತು ಜರ್ಮನಿ 1951ರಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿಕೊಂಡಿದ್ದು, 2026ರಲ್ಲಿ ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷಾಚರಣೆಯನ್ನು ಆಚರಿಸುತ್ತಿವೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.