
ಬೆಂಗಳೂರು, 10 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯನ್ನು ಖಂಡಿಸಿ ಜಾರಕಿಹೊಳಿ ಅಭಿಮಾನಿಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
‘ಸತೀಶ್ ಜಾರಕಿಹೊಳಿ ಅವರು ಅಹಿಂದ, ಶೋಷಿತರು ಹಾಗೂ ಬಡವರ ಆಶಾಕಿರಣವಾಗಿದ್ದಾರೆ. ಅವರ ಸಂಘಟನಾ ಚಾತುರ್ಯ ಮತ್ತು ರಾಜಕೀಯ ಚಾಣಕ್ಯತನವನ್ನು ಸಹಿಸಲಾಗದೆ ಬಿಜೆಪಿ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಇಡಿ ಮೂಲಕ ಷಡ್ಯಂತ್ರ ನಡೆಸುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.
‘ಯಾವುದೇ ಚುನಾವಣೆಗೆ ಸತೀಶ್ ಜಾರಕಿಹೊಳಿ ಅವರು ಸ್ಪರ್ಧಿಸಿದರೂ ಬಿಜೆಪಿ–ಜೆಡಿಎಸ್ ಮೈತ್ರಿಗೆ ಸೋಲು ಖಚಿತ ಎಂಬ ಭೀತಿಯಿಂದ ಅವರ ವಿರುದ್ಧ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಜನಪ್ರಿಯ ನಾಯಕರ ತೇಜೋವಧೆಗೆ ಮುಂದಾಗಿರುವ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.
ಸತೀಶ್ ಜಾರಕಿಹೊಳಿ ಅವರಿಗೆ ನೀಡಲಾಗುತ್ತಿರುವ ಕಿರುಕುಳವನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R