ನಾಳೆ ಬೀದರ್ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ
ಬೀದರ್ ವಿಶ್ವವಿದ್ಯಾಲಯ ಘಟಿಕೋತ್ಸವ
Bidar University to Hold First Convocation Ceremony Tomorrow


ಬೀದರ್, 11 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಬೀದರ್ ವಿಶ್ವವಿದ್ಯಾಲಯ ಸ್ಥಾಪನೆಯಾದ ಬಳಿಕ ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯದ ಘಟಿಕೋತ್ಸವ ಸೆ.12ರಂದು ನಡೆಯಲಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿಯಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಘಟಿಕೋತ್ಸವ ಆಯೋಜಿಸಲಾಗಿದೆ.

ಬೀದರ್ ವಿಶ್ವವಿದ್ಯಾಲಯದಲ್ಲಿ ಆಡಿಟೋರಿಯಂ ಕೊರತೆ ಇರುವ ಹಿನ್ನೆಲೆಯಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣವನ್ನು ಘಟಿಕೋತ್ಸವಕ್ಕೆ ಆಯ್ಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.ಮೊದಲ ಘಟಿಕೋತ್ಸವದಲ್ಲಿ ಒಟ್ಟು 112 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು.

ಇದರಲ್ಲಿ 10 ಸ್ನಾತಕ ಹಾಗೂ 102 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ 20 ಪ್ರತಿಭಾನ್ವಿತ ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಈ ಪೈಕಿ 11 ವಿಶ್ವವಿದ್ಯಾಲಯದ ಪದಕಗಳು ಹಾಗೂ 9 ಪ್ರಾಯೋಜಿತ ಚಿನ್ನದ ಪದಕಗಳಾಗಿವೆ.

ಇದೇ ವೇಳೆ ಇಬ್ಬರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ಸಮಾಜ ಸೇವಕ ನಾಗಯ್ಯಾ ಸ್ವಾಮಿ ಹಾಗೂ ಸಾಹಿತಿ ಎಸ್.ಎಂ. ಜನವಾಡ್ಕರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು.

ಬೀದರ್ ಜಿಲ್ಲೆಯಲ್ಲಿ ಈಗ ಎರಡು ವಿಶ್ವವಿದ್ಯಾಲಯಗಳಿದ್ದು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಳಿಕ ಬೀದರ್ ವಿಶ್ವವಿದ್ಯಾಲಯ ಎರಡನೇ ವಿಶ್ವವಿದ್ಯಾಲಯವಾಗಿದೆ ಎಂದು ಕುಲಪತಿ ಬಿ.ಎಸ್. ಬಿರಾದಾರ್ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande