ಸಮರ್ಪಕ ಸಾರಿಗೆ ಸೌಲಭ್ಯಕ್ಕಾಗಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಗದಗ, 11 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಲಕ್ಕುಂಡಿಯಿಂದ ಪ್ರತಿನಿತ್ಯ ಗದಗ ನಗರಕ್ಕೆ ಶಾಲಾ-ಕಾಲೇಜು, ಉದ್ಯೋಗ ಹಾಗೂ ವಿವಿ
ಫೋಟೋ


ಗದಗ, 11 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:- ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ.

ಲಕ್ಕುಂಡಿಯಿಂದ ಪ್ರತಿನಿತ್ಯ ಗದಗ ನಗರಕ್ಕೆ ಶಾಲಾ-ಕಾಲೇಜು, ಉದ್ಯೋಗ ಹಾಗೂ ವಿವಿಧ ಕೆಲಸಗಳಿಗಾಗಿ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರಯಾಣಿಸುತ್ತಾರೆ. ಆದರೆ ಲಕ್ಕುಂಡಿ ಮಾರ್ಗವಾಗಿ ಸಂಚರಿಸಬೇಕಾದ ಕೆಲವು ಬಸ್ಗಳು ಗ್ರಾಮಕ್ಕೆ ಬಾರದೆ ಬೈಪಾಸ್ ರಸ್ತೆಯಲ್ಲೇ ಸಂಚರಿಸುತ್ತಿರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಲಕ್ಕುಂಡಿ ಗ್ರಾಮದಿಂದ ಗದಗ ನಗರಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಂತಾಗಿದೆ. ಬೆಳಗಿನ ಸಮಯದಲ್ಲಿ ಶಾಲಾ-ಕಾಲೇಜಿಗೆ ತೆರಳುವ ಸಂದರ್ಭದಲ್ಲಿ ಸೂಕ್ತ ಸಮಯಕ್ಕೆ ಬಸ್ಗಳು ದೊರೆಯದೆ ವಿದ್ಯಾರ್ಥಿಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ತರಗತಿಗಳಿಗೆ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಶೈಕ್ಷಣಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೈಪಾಸ್ನಲ್ಲಿ ಹೋಗುವ ಬಸ್ಗಳು ಲಕ್ಕುಂಡಿ ಮೂಲಕವೇ ಸಂಚರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಲಕ್ಕುಂಡಿ ಮಾರ್ಗವಾಗಿ ಬಸ್ಗಳನ್ನು ಸಂಚರಿಸಲು ಸಾಧ್ಯವಾಗದಿದ್ದರೆ, ಕನಿಷ್ಠ ಲಕ್ಕುಂಡಿ–ಗದಗ ನಡುವೆ ಪರ್ಯಾಯವಾಗಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸಾರಿಗೆ ಇಲಾಖೆಗೆ ಹಲವು ಬಾರಿ ಸಮಸ್ಯೆ ತಿಳಿಸಿದ್ದರೂ ಸಮರ್ಪಕ ಪರಿಹಾರ ದೊರೆತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ ಆಕ್ರೋಶಗೊಂಡ ಶಾಲಾ-ಕಾಲೇಜು ವಿದ್ಯಾರ್ಥಿಗಳು ಲಕ್ಕುಂಡಿ ಬಸ್ ನಿಲ್ದಾಣದ ಬಳಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಈ ವೇಳೆ ನಾಲ್ಕೈದು ಬಸ್ಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

‘ಬಸ್ ಸೌಲಭ್ಯ ಇಲ್ಲದೆ ನಾವು ಶಾಲಾ-ಕಾಲೇಜಿಗೆ ಹೇಗೆ ಹೋಗಬೇಕು? ಪ್ರತಿದಿನವೂ ಬಸ್ಗಾಗಿ ಕಾಯುತ್ತಾ ಸಮಯ ಕಳೆಯಬೇಕಾದ ಪರಿಸ್ಥಿತಿ ಬಂದಿದೆ’ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ವ್ಯವಸ್ಥೆ ಅತ್ಯಂತ ಪ್ರಮುಖವಾಗಿದ್ದು, ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಕೆಲಕಾಲ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಲಕ್ಕುಂಡಿ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ, ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಬೆಳಗ್ಗೆ ಮತ್ತು ಸಂಜೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಹಾಗೂ ಬೈಪಾಸ್ ಮಾರ್ಗದಲ್ಲಿ ಸಂಚರಿಸುವ ಬಸ್ಗಳನ್ನು ಲಕ್ಕುಂಡಿ ಮೂಲಕ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಕೂಡಲೇ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಬಸ್ ಸೌಲಭ್ಯ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande