
ದಾವಣಗೆರೆ, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಾಗರಿಕ ಸೌಹಾರ್ದ ಸಭೆ ನಡೆಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಗಣೇಶೋತ್ಸವ ಮಂಡಳಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
ಗಣೇಶೋತ್ಸವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಡಿಜೆ ಬಳಕೆಗೆ ಅನುಮತಿ ಇಲ್ಲಗಣೇಶೋತ್ಸವದ ವೇಳೆ ಡಿಜೆ ಬಳಕೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿತು.
ಸ್ಪೀಕರ್ಗಳ ಅಳವಡಿಕೆಗೆ ಸಂಬಂಧಿಸಿದಂತೆ ಎರಡು ಸ್ಪೀಕರ್ಗಳಿಗೆ ಅನುಮತಿ ನೀಡಬೇಕೇ ಅಥವಾ ನಾಲ್ಕು ಸ್ಪೀಕರ್ಗಳಿಗೆ ಅವಕಾಶ ಕಲ್ಪಿಸಬೇಕೇ ಎಂಬ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗಣೇಶೋತ್ಸವ ಮಂಡಳಿಗಳ ಸದಸ್ಯರು ವಿವಿಧ ಇಲಾಖೆಗಳ ಅನುಮತಿ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, “ಗಣೇಶೋತ್ಸವ ಮಂಡಳಿಗಳಿಗೆ ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿಯೂ ಆಯಾ ಪೊಲೀಸ್ ಠಾಣೆಗಳಲ್ಲಿ ಸಿಂಗಲ್ ವಿಂಡೋ ವ್ಯವಸ್ಥೆ ಕಲ್ಪಿಸಲಾಗುವುದು” ಎಂದು ಭರವಸೆ ನೀಡಿದರು.
ಸಭೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಮುಖಂಡ ಸತೀಶ್ ಪೂಜಾರಿ ಅವರು ಅನ್ಯ ಸಮುದಾಯಗಳ ಆಚರಣೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಲು ಮುಂದಾದರು.
ಈ ವೇಳೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರು, ಹಿಂದಿನ ವಿಚಾರಗಳನ್ನು ಪ್ರಸ್ತಾಪಿಸದೆ ಪ್ರಸ್ತುತ ಎದುರಾಗಿರುವ ಸಮಸ್ಯೆಗಳ ಕುರಿತು ಮಾತ್ರ ಮಾತನಾಡುವಂತೆ ಸೂಚಿಸಿದರು.
ಸತೀಶ್ ಪೂಜಾರಿ ಅವರಿಗೆ ಎಚ್ಚರಿಕೆ ನೀಡಿದ ಎಸ್ಪಿ ಹೆಚ್.ಟಿ. ಶೇಖರ್, ಅಸಂಬದ್ಧ ಮಾತುಗಳನ್ನು ಆಡದಂತೆ ಸೂಚಿಸಿದರು. ಸಭೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಅಧಿಕಾರಿಗಳು ಎಲ್ಲರಿಗೂ ಮನವಿ ಮಾಡಿದರು.
ಗೌರಿ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿತು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R