
ಬೆಂಗಳೂರು, 12 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಗಣೇಶೋತ್ಸವಕ್ಕೆ ಸಜ್ಜಾಗಿದ್ದು, ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಅಗತ್ಯ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಸೆಪ್ಟೆಂಬರ್ 14ರ ಬಳಿಕ ಹೊಸದಾಗಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ನಗರದ ವಿವಿಧ ಕೆರೆ, ಕಲ್ಯಾಣಿ ಹಾಗೂ ನಿಗದಿತ ಸ್ಥಳಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿಸರ್ಜನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಈಜುಗಾರರು, ಕ್ರೇನ್, ಅಗ್ನಿಶಾಮಕ ವಾಹನಗಳು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮನೆಗಳಲ್ಲಿ ಪ್ರತಿಷ್ಠಾಪಿಸುವ ಸಣ್ಣ ಮೂರ್ತಿಗಳ ವಿಸರ್ಜನೆಗೆ ವಾರ್ಡ್ವಾರು ಸಂಚಾರಿ ವಿಸರ್ಜನಾ ಟ್ಯಾಂಕರ್ಗಳ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು ನೀಡಿರುವ ಜಿಬಿಎ, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ), ಥರ್ಮಾಕೋಲ್ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳ ಬಳಕೆಯನ್ನು ನಿಷೇಧಿಸಿದೆ. ಮಣ್ಣಿನ ಹಾಗೂ ಪರಿಸರ ಸ್ನೇಹಿ ಮೂರ್ತಿಗಳಿಗೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ವಿಸರ್ಜನಾ ಸ್ಥಳಗಳಲ್ಲಿ ವೈದ್ಯಕೀಯ ತಂಡ, ಆಂಬುಲೆನ್ಸ್ ಹಾಗೂ ತುರ್ತು ಸೇವೆಗಳನ್ನು ಸಿದ್ಧವಾಗಿಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರ ಜೊತೆಗೆ ಗಣೇಶೋತ್ಸವ ಆಯೋಜಕರು ಪೊಲೀಸ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯಬೇಕು. ಮೆರವಣಿಗೆ ಮಾರ್ಗ, ಸಮಯ ಹಾಗೂ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಡಿಜೆ ಬಳಕೆಗೆ ನಿರ್ಬಂಧವಿದ್ದು, ನಿಗದಿತ ಶಬ್ದಮಿತಿಯೊಳಗೆ ಧ್ವನಿವರ್ಧಕ ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ.
“ಗಣೇಶೋತ್ಸವವನ್ನು ಶಾಂತಿಯುತ, ಶಿಸ್ತುಬದ್ಧ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರು ಮತ್ತು ಉತ್ಸವ ಸಮಿತಿಗಳು ಅಧಿಕಾರಿಗಳ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು” ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R