
ಬೆಂಗಳೂರು, 12 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂದು ಆರೋಪಿಸಿ, ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿಕೆ ನೀಡಿರುವ ಅವರು, ಶಿಕ್ಷಣ ವ್ಯವಸ್ಥೆ ಕುರಿತು ದೊಡ್ಡ ದೊಡ್ಡ ಭಾಷಣ ಮಾಡುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮದೇ ಪಕ್ಷದ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ವಿಶ್ವವಿದ್ಯಾಲಯಗಳ ದುಸ್ಥಿತಿಯನ್ನು ಗಮನಿಸಬೇಕು ಎಂದು ಟೀಕಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ 10 ಸಾವಿರ ರೂ. ನೀಡಿದರೆ ಒಂದು ವಿಷಯದಲ್ಲಿ ಉತ್ತೀರ್ಣಗೊಳಿಸುವ ಪರೀಕ್ಷಾ ಅಕ್ರಮ ಬಯಲಿಗೆ ಬಂದಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಲಂಚ ಪಡೆದು, ವಿಶ್ವವಿದ್ಯಾಲಯದ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆಯ ಅಂತರ್ಜಾಲ ತಾಣದಲ್ಲಿ ಅಂಕಗಳನ್ನು ತಿದ್ದುಪಡಿ ಮಾಡಿ ಉತ್ತೀರ್ಣಗೊಳಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ರಾತ್ರಿ-ಹಗಲು ಕಷ್ಟಪಟ್ಟು ಓದುತ್ತಿರುವ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯವನ್ನು ಇಂತಹ ಅಕ್ರಮಗಳು ಕತ್ತಲಿಗೆ ತಳ್ಳುತ್ತಿವೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಉದ್ದೇಶಿಸಿ ಮಾತನಾಡಿರುವ ಅವರು, ತಮ್ಮ ಆಡಳಿತದಲ್ಲಿ ವಿದ್ಯಾದೇಗುಲಗಳು ಭ್ರಷ್ಟಾಚಾರದ ಅಡ್ಡೆಗಳಾಗಿ ಬದಲಾಗಿವೆ ಎಂದು ಆರೋಪಿಸಿದ್ದಾರೆ. ಈ ಅಕ್ರಮದ ಹಿಂದೆ ಇರುವ ‘ಕಾಣದ ಕೈಗಳು’ ಯಾರದ್ದು ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಹಣ ನೀಡಿದರೆ ಪದವಿ ಪ್ರಮಾಣಪತ್ರ ಪಡೆಯಬಹುದಾದ ಪರಿಸ್ಥಿತಿ ನಿರ್ಮಾಣವಾದರೆ, ಕಷ್ಟಪಟ್ಟು ಅಭ್ಯಾಸ ಮಾಡುವ ಬಡ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ನ್ಯಾಯವೇನು ಎಂದು ಪ್ರಶ್ನಿಸಿರುವ ಅವರು, ಕರ್ನಾಟಕದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಗೆಪಾಟಲಿಗೀಡು ಮಾಡಿರುವ ಈ ಘಟನೆಯ ಕುರಿತು ಸಮಗ್ರ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅಶೋಕ್ ಎಚ್ಚರಿಕೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.