
ಬೀದರ್, 13 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ.
ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಮ್ಮೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಭಾಲ್ಕಿ ಪಟ್ಟಣದ ಲೆಕ್ಚರರ್ ಕಾಲನಿಯಲ್ಲಿರುವ ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ ಸಿಐಡಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಅಮರ್ ಅವರನ್ನು ಬ್ಯಾಂಕ್ಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆಯ ಭಾಗವಾಗಿ ಹಣಕಾಸಿನ ವಹಿವಾಟುಗಳ ಕುರಿತು ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಓಂಕಾರ ಎಂಬುವವರ ಖಾತೆಯಿಂದ ಹೆಚ್ಚಿನ ಪ್ರಮಾಣದ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ವಹಿವಾಟುಗಳ ಮೇಲೆ ಅಧಿಕಾರಿಗಳ ಗಮನ ಕೇಂದ್ರೀಕೃತವಾಗಿದೆ ಎಂದು ತಿಳಿದುಬಂದಿದೆ.
ಹಣ ವರ್ಗಾವಣೆಯ ಸ್ವರೂಪ, ಸಂಬಂಧಪಟ್ಟ ಖಾತೆಗಳು ಹಾಗೂ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಿಐಡಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಈ ಹಿಂದೆ ಕೂಡ ಇದೇ ಬ್ಯಾಂಕ್ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಇದೀಗ ಮತ್ತೊಮ್ಮೆ ಪರಿಶೀಲನೆ ನಡೆಸಿರುವುದು ಪ್ರಕರಣದ ತನಿಖೆಯಲ್ಲಿ ಮಹತ್ವ ಪಡೆದುಕೊಂಡಿದೆ.
ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಹಣಕಾಸು ವಹಿವಾಟುಗಳು ಹಾಗೂ ದಾಖಲೆಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಅದರ ಭಾಗವಾಗಿ ಬ್ಯಾಂಕ್ನಲ್ಲಿ ಪರಿಶೀಲನೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R