
ಮಂಡ್ಯ, 13 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ನಿಟ್ಟಿನಲ್ಲಿ ‘ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್’ ವತಿಯಿಂದ ನಗರದಲ್ಲಿ ವಿಭಿನ್ನ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಟ್ರಸ್ಟ್ ಅಧ್ಯಕ್ಷ ವಿನಯ್ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ 1,000 ಮಣ್ಣಿನ ಗೌರಿ–ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು.
ಶಿವ–ಪಾರ್ವತಿ, ಸ್ವಾಮಿ ವಿವೇಕಾನಂದ ಹಾಗೂ ಬಾಲಗಂಗಾಧರ ತಿಲಕರ ವೇಷಧಾರಿಗಳು ಮಣ್ಣಿನ ಗಣೇಶ ಮೂರ್ತಿಗಳನ್ನು ಸಾರ್ವಜನಿಕರಿಗೆ ವಿತರಿಸಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಕುರಿತು ಅರಿವು ಮೂಡಿಸಿದರು.
ವಿಶೇಷ ಜಾಗೃತಿ ಹಾಗೂ ಮೂರ್ತಿ ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪಿಒಪಿ ಗಣೇಶ ಮೂರ್ತಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಯುವಶಕ್ತಿ ಇದನ್ನು ಪ್ರೇರಣೆಯಾಗಿಟ್ಟುಕೊಳ್ಳಬೇಕು” ಎಂದು ಮನವಿ ಮಾಡಿದರು.
ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸಿ ಪೂಜಿಸುವ ಮೂಲಕ ಹಬ್ಬದ ಸಂಭ್ರಮದ ಜತೆಗೆ ಪರಿಸರ ಸಂರಕ್ಷಣೆಯಲ್ಲೂ ಸಾರ್ವಜನಿಕರು ತಮ್ಮ ಕೊಡುಗೆ ನೀಡಬೇಕು ಎಂದು ಟ್ರಸ್ಟ್ ಪದಾಧಿಕಾರಿಗಳು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಟ್ರಸ್ಟ್ ಕಾರ್ಯಕರ್ತರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R