ಟಿ. ನರಸೀಪುರದಲ್ಲಿ ಇನ್ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ; ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೋಲಿಸ್ ವಶಕ್ಕೆ
ಮೈಸೂರು, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದರೆನ್ನಲಾದ ಹೇಳಿಕೆ ಜಿಲ್ಲೆಯಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್
ಅಶೋಕ ಮತ್ತಿತರರು


ಮೈಸೂರು, 13 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದರೆನ್ನಲಾದ ಹೇಳಿಕೆ ಜಿಲ್ಲೆಯಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಪರಿಸ್ಥಿತಿ ಬಿಗಡಾಯಿಸಿತು.

ಟಿ. ನರಸೀಪುರದ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಅವರು ಗಣೇಶೋತ್ಸವ ಆಚರಿಸುವ ಯುವಕರಿಗೆ ಮಸೀದಿ ಮುಂದೆ ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿದರೆ ‘ಗ್ರಹಚಾರ ಬಿಡಿಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಇನ್‌ಸ್ಪೆಕ್ಟರ್ ಧನಂಜಯ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಗಣೇಶನ ಮೂರ್ತಿಯನ್ನು ಹಿಡಿದು ಮೆರವಣಿಗೆ ನಡೆಸಿ, ಅಹೋರಾತ್ರಿ ಧರಣಿ ನಡೆಸಲು ಪ್ರತಿಭಟನಾಕಾರರು ಮುಂದಾದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಧಿಕಾರಿಯನ್ನು ಅಮಾನತುಗೊಳಿಸುವವರೆಗೆ ಧರಣಿ ಮುಂದುವರಿಸುವುದಾಗಿ ಪಟ್ಟುಹಿಡಿದರು.

ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿತು. ಗಣೇಶನ ಮೂರ್ತಿಯೊಂದಿಗೆ ಮೆರವಣಿಗೆ ನಡೆಸಲು ಮುಂದಾದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ತಡೆದರು. ಬಳಿಕ ಪ್ರತಿಭಟನಾಕಾರರನ್ನು ವಾಹನಗಳಲ್ಲಿ ಕರೆದೊಯ್ದು ವಶಕ್ಕೆ ಪಡೆದರು. ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಘಟನೆಯ ಹಿನ್ನೆಲೆಯಲ್ಲಿ ಟಿ. ನರಸೀಪುರ ಪಟ್ಟಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande