
ಕೋಲಾರ,14 ಸೆಪ್ಟೆಂಬರ್ (ಹಿ.ಸ)
ಆ್ಯಂಕರ್ : ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಿ, ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ಆಗ್ರಹಿಸಿ ಅಖಂಡ ಭಾರತ ವಿನಾಯಕ ಮಹಾಸಭಾ ವತಿಯಿಂದ ನಗರದ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ ಮುಂಭಾಗ ೧೫ನೇ ವರ್ಷದ ಗಣೇಶೋತ್ಸವ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ಕಾರ್ಯಕ್ರಮದ ಸ್ಥಳದಲ್ಲಿ ಮಾತನಾಡಿದ ಅವರು, ಕೋಲಾರ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ನೀರಿನ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಗಮನಹರಿಸಬೇಕು. ಜಿಲ್ಲೆಯ ಜನರ ಬಹುದಿನಗಳ ನೀರಿನ ನಿರೀಕ್ಷೆ ಈಡೇರಿಸಲು ಎಲ್ಲರೂ ಪಕ್ಷಾತೀತವಾಗಿ ಒಂದಾಗಬೇಕು ಎಂಬ ಉದ್ದೇಶದಿಂದ ಈ ಗಣೇಶೋತ್ಸವ ನಡೆಯುತ್ತಿದೆ ಎಂದರು.
ಸೋಮವಾರ ಸಂಜೆ ಗಣಪತಿ ಪ್ರತಿಷ್ಠಾಪನೆ ನಡೆಯಿತು. ಸೆ.೧೫ರಂದು ಆರತಿ ಹಾಗೂ ವರುಣದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಸೆ.೧೭ರಂದು ರಂಗೋಲಿ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೧೦ ಮಂದಿಗೆ ಯುವಕರಿಗೆ ಪ್ರೇರಣೆಯಾಗುವಂತೆ ‘ಸೇವಾರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಸೆ.೧೮ರಂದು ಅದ್ದೂರಿ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, ಗಣೇಶೋತ್ಸವದಲ್ಲಿ ತಂಡಗಳು, ವಾದ್ಯಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿವೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗಿದ್ದು, ಪಟಾಕಿ ಸಿಡಿಸಿ, ಆರತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ನಗರದ ವಿವಿದೆಡೆ ಸಾರ್ವಜನಿಕರು ಗಣೇಶೋತ್ಸವ ಆಚರಿಸಿದರು. ಪೊಲೀಸರು ವ್ಯಾಪಕ ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್