ಶಾಂತಿಯುತ ಹಾಗೂ ಸುರಕ್ಷಿತ ಗಣೇಶೋತ್ಸವ ಆಚರಣೆಗೆ ಸಾರ್ವಜನಿಕರ ಸಹಕಾರ ಕೋರಿದ ಎಸ್ಪಿ ಪಿಯೂಷ್ ಗೋಯೆಲ್
ಬಾಗಲಕೋಟೆ, 14 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಗಣೇಶೋತ್ಸವದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್
ಬಂದೋಬಸ್ತ್


ಬಾಗಲಕೋಟೆ, 14 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಗಣೇಶೋತ್ಸವದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ಗೋಯೆಲ್ ತಿಳಿಸಿದ್ದಾರೆ.

ಜಿಲ್ಲೆಯ ವಿವಿಧ ಗ್ರಾಮ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಪೂಜೆ, ಮೆರವಣಿಗೆ ಹಾಗೂ ವಿಸರ್ಜನೆ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಪ್ರಮುಖ ಸ್ಥಳಗಳು, ಗಣೇಶ ಮಂಟಪಗಳು, ಮೆರವಣಿಗೆ ಸಾಗುವ ಮಾರ್ಗಗಳು ಹಾಗೂ ವಿಸರ್ಜನಾ ಸ್ಥಳಗಳಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗಿದೆ.

ಗಣೇಶೋತ್ಸವವು ಭಕ್ತಿ, ಸೌಹಾರ್ದತೆ ಹಾಗೂ ಸಹೋದರತ್ವದ ಸಂಕೇತವಾಗಿದ್ದು, ಎಲ್ಲ ಸಮುದಾಯಗಳ ಜನರು ಪರಸ್ಪರ ಗೌರವದಿಂದ ಹಬ್ಬವನ್ನು ಆಚರಿಸುವಂತೆ ಎಸ್ಪಿ ಪಿಯೂಷ್ ಗೋಯೆಲ್ ಮನವಿ ಮಾಡಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಅವರು ಸೂಚಿಸಿದ್ದಾರೆ.

ಗಣೇಶ ಮಂಟಪಗಳ ಆಯೋಜಕರು ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳು ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಹಕರಿಸಬೇಕು. ಮೆರವಣಿಗೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು.

ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಗೆ ಪೊಲೀಸ್ ಇಲಾಖೆ ಮೊದಲ ಆದ್ಯತೆ ನೀಡಿದ್ದು, ಹಬ್ಬವನ್ನು ಎಲ್ಲರೂ ಸಂತಸ, ಸಂಭ್ರಮ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಸ್ಪಿ ಮನವಿ ಮಾಡಿದ್ದಾರೆ.

“ಬಾಗಲಕೋಟ ಜಿಲ್ಲಾ ಪೊಲೀಸ್ — ನಿಮ್ಮ ಸುರಕ್ಷತೆ, ನಮ್ಮ ಹೊಣೆ” ಎಂಬ ಸಂದೇಶದೊಂದಿಗೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುರಕ್ಷಿತವಾಗಿ ಆಚರಿಸೋಣ ಎಂದು ಎಸ್ಪಿ ಪಿಯೂಷ್ ಗೋಯೆಲ್ ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande