
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ
ಹತ್ತಿರಕಿಹಾಳದಿಂದ ನಂದಿಹಾಳದವರೆಗೆ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಶಿವಾನಂದ ಪಾಟೀಲ್ ಅವರು ಇಂದು ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ವೀಕ್ಷಿಸಿದರು. ಕಾಮಗಾರಿಯ ಪ್ರಗತಿ, ಕೈಗೊಳ್ಳಲಾಗಿರುವ ವಿವಿಧ ಹಂತಗಳು ಹಾಗೂ ನಿರ್ಮಾಣದ ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಈ ಭಾಗದ ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ಗ್ರಾಮಸ್ಥರು, ರೈತರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು ಸೇರಿದಂತೆ ನಿತ್ಯ ಸಂಚಾರ ನಡೆಸುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವು ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಕೃಷಿ ಉತ್ಪನ್ನಗಳ ಸಾಗಣೆ ಹಾಗೂ ಸಾರ್ವಜನಿಕರ ಸಂಚಾರಕ್ಕೂ ಸಹಕಾರಿಯಾಗಲಿದೆ ಎಂದು ಶಾಸಕ ಶಿವಾನಂದ ಪಾಟೀಲ್ ತಿಳಿಸಿದರು.
ಕಾಮಗಾರಿಯ ಸಂದರ್ಭದಲ್ಲಿ ಗುಣಮಟ್ಟಕ್ಕೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಸರ್ಕಾರದ ನಿಗದಿತ ಮಾನದಂಡ ಹಾಗೂ ತಾಂತ್ರಿಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿಗೆ ಬಳಸುವ ಸಾಮಗ್ರಿಗಳ ಗುಣಮಟ್ಟವನ್ನು ಪರಿಶೀಲಿಸುವುದರ ಜೊತೆಗೆ, ರಸ್ತೆ ನಿರ್ಮಾಣದ ಪ್ರತಿಯೊಂದು ಹಂತದಲ್ಲೂ ಗುಣಮಟ್ಟ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶಿವಾನಂದ ಪಾಟೀಲ್ ಸೂಚಿಸಿದರು.
ಅಲ್ಲದೆ, ಕಾಮಗಾರಿಯನ್ನು ಅನಗತ್ಯವಾಗಿ ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿಯ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ರಸ್ತೆ ನಿರ್ಮಾಣ ಪೂರ್ಣಗೊಂಡ ಬಳಿಕವೂ ಅದರ ಗುಣಮಟ್ಟ ಮತ್ತು ಬಾಳಿಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸ್ಥಳೀಯರು ಕೂಡ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು, ರಸ್ತೆ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande