ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬರೂ ಬದ್ಧರಾಗಬೇಕು ಸಂಸದ ನಾರಾಯಣಸಾ ಭಾಂಡಗೆ
ಬಾಗಲಕೋಟೆ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 19ನೇ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ
ಸಭೆ


ಬಾಗಲಕೋಟೆ, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 19ನೇ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪ್ರಜಾಪ್ರಭುತ್ವವು ಕೇವಲ ಚುನಾವಣೆಗಳಿಗೆ ಸೀಮಿತವಾಗಿರದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ, ಸ್ವಾತಂತ್ರ್ಯ, ನ್ಯಾಯ ಹಾಗೂ ಗೌರವವನ್ನು ಒದಗಿಸುವ ವ್ಯವಸ್ಥೆಯಾಗಿದೆ.

ಪ್ರಜಾಪ್ರಭುತ್ವದ ಯಶಸ್ಸಿಗೆ ಸಂವಿಧಾನದ ಆಶಯಗಳನ್ನು ಗೌರವಿಸುವುದು ಮತ್ತು ನಾಗರಿಕರು ತಮ್ಮ ಕರ್ತವ್ಯಗಳನ್ನು ಅರಿತುಕೊಂಡು ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಯುವಜನರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಆಳವಾಗಿ ಅರ್ಥಮಾಡಿಕೊಳ್ಳಬೇಕು. ದೇಶದ ಭವಿಷ್ಯ ರೂಪಿಸುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ನಾರಾಯಣಸಾ ಭಾಂಡಗೆ ಅವರು ತಿಳಿಸಿದರು.

ಸಮಾಜದಲ್ಲಿ ಸಮಾನತೆ, ಸಹಬಾಳ್ವೆ, ಸಹಿಷ್ಣುತೆ ಹಾಗೂ ಪರಸ್ಪರ ಗೌರವದ ಮನೋಭಾವ ಬೆಳೆಸುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬಹುದು. ಜನರು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಅರಿತುಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿಜಯಾನಂದ ಕಾಶಪ್ಪನವರ, ಶಾಸಕರಾದ ಉಮೇಶ್ ಮೇಟಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅನಿಲಕುಮಾರ ದಡ್ಡಿ, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಬ್ದುಲರಜಾಕ್ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ, ಉಪವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು, ನಾಗರಿಕರ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಅರಿವು ಮೂಡಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande