ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಯ ಪ್ರಬಲ ಅಸ್ತ್ರ: ಡಾ. ಎಚ್.ಕೆ. ಪಾಟೀಲ
ಗದಗ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಅತ್ಯಂತ ಪ್ರಬಲ ಅಸ್ತ್ರವಾಗಿದ್ದು, ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿಂದು ಗದಗ ಜಿಲ್ಲಾಡ
ಫೋಟೋ


ಗದಗ, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:- ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಅತ್ಯಂತ ಪ್ರಬಲ ಅಸ್ತ್ರವಾಗಿದ್ದು, ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿಂದು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಮತದಾನದ ಹಕ್ಕು ಉಳಿದರೆ ಮಾತ್ರ ಪ್ರಜಾಪ್ರಭುತ್ವ ಮತ್ತಷ್ಟು ಶಕ್ತಿಶಾಲಿಯಾಗಲು ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ, ಸಮಾನ ಸ್ಥಾನಮಾನ ದೊರೆಯಬೇಕು. ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಂತೆ ಎಲ್ಲರೂ ಬದುಕು ನಡೆಸುವಂತಾಗಬೇಕು ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ ಅಥವಾ ಸರ್ಕಾರ ರಚನೆಯ ಪ್ರಕ್ರಿಯೆಯಲ್ಲ. ಪ್ರತಿಯೊಬ್ಬ ವ್ಯಕ್ತಿಯ ಹಕ್ಕು, ಸ್ವಾತಂತ್ರ್ಯ, ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುವ ವ್ಯವಸ್ಥೆಯಾಗಿದೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಬಡತನವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದರೂ, ಅಸ್ಪೃಶ್ಯತೆಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಸಮಾಜದಲ್ಲಿರುವ ಇಂತಹ ಅಸಮಾನತೆಗಳನ್ನು ಹೋಗಲಾಡಿಸಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು ಪ್ರಜಾಪ್ರಭುತ್ವದ ನಿಜವಾದ ಆಶಯವಾಗಿದೆ ಎಂದು ಡಾ. ಎಚ್.ಕೆ. ಪಾಟೀಲ ಹೇಳಿದರು.

ಅನುಭವ ಮಂಟಪವೇ ಮೊದಲ ಸಂಸತ್ತು

ಜಗಜ್ಯೋತಿ ಬಸವಣ್ಣನವರ ಸಾಮಾಜಿಕ ಚಿಂತನೆಗಳು ಹಾಗೂ ವಚನಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಕಾಣಬಹುದಾಗಿದೆ. ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಹೆಮ್ಮೆಯ ಸಂಗತಿ. ಬಸವಣ್ಣನವರ ಅನುಭವ ಮಂಟಪವನ್ನು ದೇಶದ ಮೊದಲ ಸಂಸತ್ತು ಎಂಬ ಪರಿಕಲ್ಪನೆಯೊಂದಿಗೆ ನೋಡಬಹುದಾಗಿದೆ. ಅನುಭವ ಮಂಟಪದ ಚರ್ಚೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳು ಇಂದಿನ ಸಂವಿಧಾನದ ಮೌಲ್ಯಗಳೊಂದಿಗೆ ಸಾಮ್ಯತೆ ಹೊಂದಿವೆ ಎಂದು ಅವರು ವಿವರಿಸಿದರು.

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವದಲ್ಲೇ ವಿಶಿಷ್ಟವಾಗಿದೆ. ಸಂವಿಧಾನವೇ ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವ ಪ್ರಮುಖ ಆಧಾರವಾಗಿದೆ. ಸಂವಿಧಾನವನ್ನು ಗೌರವಿಸುವುದು, ಅದರ ಆಶಯಗಳನ್ನು ಪಾಲಿಸುವುದು ಹಾಗೂ ಅದರ ರಕ್ಷಣೆಗೆ ಬದ್ಧರಾಗುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಹೇಳಿದರು.

ಪ್ರಜಾಪ್ರಭುತ್ವ ಜೀವನಶೈಲಿಯಾಗಬೇಕು

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸಹಾಯಕ ಕಾನೂನು ನೆರವು ಅಭಿರಕ್ಷಕ ಗುರುರಾಜ ಗೌರಿ ಮಾತನಾಡಿ, ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವಲ್ಲಿ ನೆಲ್ಸನ್ ಮಂಡೇಲಾ ಅವರ ಹೋರಾಟವನ್ನು ಸ್ಮರಿಸಬೇಕಾಗಿದೆ. ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ; ಅದು ಪ್ರತಿಯೊಬ್ಬರ ಜೀವನಶೈಲಿಯಾಗಬೇಕು. ಪ್ರಜಾಪ್ರಭುತ್ವವನ್ನು ಕೇವಲ ಮೇಲ್ನೋಟಕ್ಕೆ ಅರ್ಥಮಾಡಿಕೊಳ್ಳದೆ, ಅದರ ಮೌಲ್ಯಗಳನ್ನು ಅನುಭವಿಸುವಂತಾಗಬೇಕು ಎಂದು ಹೇಳಿದರು.

ದೇಶದ ಪ್ರಗತಿ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಅವರ ಅದ್ಭುತ ಪ್ರತಿಭೆ, ದೂರದೃಷ್ಟಿ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಇಂದಿನ ದಿನದಲ್ಲಿ ಸ್ಮರಿಸಬೇಕಾಗಿದೆ ಎಂದು ತಿಳಿಸಿದರು.

ಸಂವಿಧಾನ ರಚನೆಯ ಸಂದರ್ಭದಲ್ಲಿ ನಡೆದ ಚರ್ಚೆಗಳು ಹಾಗೂ ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳಲು ವಿದ್ಯಾರ್ಥಿಗಳು ಮತ್ತು ಯುವಜನರು ಸೇರಿದಂತೆ ಸಂವಿಧಾನಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕಾನೂನುಗಳ ಪೂರ್ಣ ಪ್ರಮಾಣದ ಅನುಷ್ಠಾನವಾಗಬೇಕು. ಯಾವುದೇ ಕಾನೂನು ದುರುಪಯೋಗವಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ಶಾಸಕರಾಗಿ ಆಯ್ಕೆಯಾದ ನಂತರ ವಿಧಾನಸಭೆಯಲ್ಲಿ ಜನಪ್ರತಿನಿಧಿಗಳು ಯಾವ ರೀತಿಯ ಕರ್ತವ್ಯಗಳನ್ನು ನಿರ್ವಹಿಸಬೇಕು, ವಿಧಾನಸಭೆಯ ಕಾರ್ಯವಿಧಾನ ಹೇಗಿರುತ್ತದೆ ಹಾಗೂ ಜನರ ಸಮಸ್ಯೆಗಳನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಪ್ರಸ್ತಾಪಿಸಬೇಕು ಎಂಬ ಕುರಿತು ಅವರು ವಿವರವಾಗಿ ತಿಳಿಸಿದರು.

ಸಂವಿಧಾನದ ಪೀಠಿಕೆ ಬೋಧನೆ

ಕಾರ್ಯಕ್ರಮದ ಅಂಗವಾಗಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಷರೀಫ್ ಬಿಳಿಎಲಿ ಹಾಗೂ ಸಂಗಡಿಗರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಬಿಂಬಿಸುವ ಗೀತೆಗಳನ್ನು ಪ್ರಸ್ತುತಪಡಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಕಾರ್ಯಕ್ರಮಕ್ಕೂ ಮುನ್ನ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಬಿಡಿಸಲಾಗಿದ್ದ ಆಕರ್ಷಕ ರಂಗೋಲಿ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಮರೇಶ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ, ಎಸ್.ಎನ್. ಬಳ್ಳಾರಿ, ಆದಪ್ಪನವರ, ಬಸವರಾಜ ಕಡೆಮನಿ, ಆನಂದ ಸಿಂಗಾಡೆ, ಮಾರ್ತಾಂಡ ಹಾದಿಮನಿ, ಪ್ರೊ. ಕೆ.ಎಚ್. ಬೇಲೂರ ಸೇರಿದಂತೆ ಜಿಲ್ಲಾ ಜಾಗೃತ ಸಮಿತಿಯ ನಾಮನಿರ್ದೇಶಿತ ಸದಸ್ಯರು, ನಗರಸಭೆ ಸದಸ್ಯರು, ಸಫಾಯಿ ಕರ್ಮಚಾರಿ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ಹಾಗೂ ನಂದಿತಾ ಹಂಪಿಹೊಳಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಪ್ರಭುತ್ವದ ಮೌಲ್ಯಗಳು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ದೈನಂದಿನ ಬದುಕಿನ ಭಾಗವಾಗಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande