
ತುಮಕೂರು, 16 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಮೈಸೂರು ಮಾದರಿಯಲ್ಲಿ ತುಮಕೂರು ನಗರದಲ್ಲೂ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಆರಂಭವಾಗಿದ್ದು, ತುಮಕೂರು ದಸರಾ ಉತ್ಸವ–2026ರ ಲಾಂಛನವನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಬುಧವಾರ ಅನಾವರಣಗೊಳಿಸಿದರು.
ನಗರದ ಗ್ರಂಥಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಜಿಟಲ್ ಹ್ಯಾಂಡ್ ಸೈನಿಂಗ್ ಮೂಲಕ ಲಾಂಛನ ಅನಾವರಣ ಮಾಡಲಾಯಿತು. ಅಕ್ಟೋಬರ್ 11ರಿಂದ 11 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್, “ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾವನ್ನು ಜನರ ಸಹಭಾಗಿತ್ವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು. 11 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪರಿಚಯಿಸಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿ ಗಣೇಶ್, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಎಡಿಸಿ ತಿಪ್ಪೇಸ್ವಾಮಿ, ಎಸಿ ನಾಹಿದಾ ಜಂಜಂ, ಪಾಲಿಕೆ ಆಯುಕ್ತೆ ಶುಭ ಸೇರಿದಂತೆ ಅಧಿಕಾರಿಗಳು ಹಾಗೂ ದಸರಾ ಸಮಿತಿಗಳ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R