
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಗಣೇಶ ಮೂರ್ತಿ ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಗಣೇಶ ಮೂರ್ತಿ ವಿಸರ್ಜನಾ ಸ್ಥಳಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಗಸ್ತು ನಡೆಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅವರು ಸೂಚಿಸಿದ್ದಾರೆ.
“ಸಾರ್ವಜನಿಕರು, ಗಣೇಶ ಮೂರ್ತಿ ಪ್ರತಿಷ್ಠಾಪನಾ ಆಯೋಜಕರು ಹಾಗೂ ಮುಖಂಡರೊಂದಿಗೆ ನಿರಂತರ ಸಮನ್ವಯ ಸಾಧಿಸಬೇಕು. ಯಾವುದೇ ಅಗತ್ಯ ಮಾಹಿತಿ ದೊರೆತ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತರಬೇಕು” ಎಂದು ಆಯುಕ್ತರು ತಿಳಿಸಿದ್ದಾರೆ.
ಮೆರವಣಿಗೆ ಸಂದರ್ಭದಲ್ಲಿ ನೇತ್ರ ಕ್ಯಾಮೆರಾ ಹಾಗೂ ಮ್ಯಾಜಿಕ್ ಬಾಕ್ಸ್ ಕ್ಯಾಮೆರಾಗಳನ್ನು ಸಮರ್ಪಕವಾಗಿ ಬಳಸಬೇಕು. ಕೆಎಸ್ಆರ್ಪಿ ತುಕಡಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿ, ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸುವುದರ ಜೊತೆಗೆ ರೂಟ್ ಮಾರ್ಚ್ ನಡೆಸಿ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸೂಚಿಸಲಾಗಿದೆ.
ಮೆರವಣಿಗೆ ಆಯೋಜಕರು ನಿಗದಿತ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಮೆರವಣಿಗೆ ಮಾರ್ಗ ಹಾಗೂ ಸ್ಥಳವನ್ನು ಮುಂಚಿತವಾಗಿ ಪರಿಶೀಲಿಸಿ, ಸ್ಥಳೀಯ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂದು ಆಯುಕ್ತರು ಹೇಳಿದ್ದಾರೆ.
ಈಶಾನ್ಯ ವಿಭಾಗದ ಡಿಸಿಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ವಿವಿಧ ಸಲಹೆ-ಸೂಚನೆಗಳನ್ನು ನೀಡಿದ ಆಯುಕ್ತರು, ಗಣೇಶೋತ್ಸವವನ್ನು ಶಾಂತಿಯುತ, ಸುರಕ್ಷಿತ ಹಾಗೂ ಸೌಹಾರ್ದಯುತವಾಗಿ ಆಚರಿಸಲು ಪೊಲೀಸ್ ಇಲಾಖೆ, ಸಾರ್ವಜನಿಕರು ಮತ್ತು ಆಯೋಜಕರ ನಡುವೆ ಉತ್ತಮ ಸಮನ್ವಯ ಇರಬೇಕು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R