
ಕೋಲಾರ, 17 ಸೆಪ್ಟೆಂಬರ್ (ಹಿ.ಸ)
ಆ್ಯಂಕರ್ : ಜಿಲ್ಲೆಯ ರೈತರ ಹಿತರಕ್ಷಣೆ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್ಗಳು ಮತ್ತು ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ಬಿಐ ವ್ಯವಸ್ಥಾಪಕರಾದ ದಾಮೋದರ್ ಹಾಗೂ ಬ್ಯಾಂಕ್ ಸಿಬ್ಬಂದಿಯೊ0ದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ರೈತರಿಗೆ ಲಭ್ಯವಿರುವ ಬ್ಯಾಂಕಿAಗ್ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ತಾಲ್ಲೂಕು ಮಟ್ಟದಲ್ಲಿ ರೈತರೊಂದಿಗೆ ನೇರ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅವರು ಸಲಹೆ ನೀಡಿದರು. ಅಲ್ಲದೆ, ರೈತರ ಅಹವಾಲುಗಳನ್ನು ಆಲಿಸಿ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವತ್ತ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.
ಕೋಲಾರ ಜಿಲ್ಲೆಯ ರೈತರ ಕಾರ್ಯವೈಖರಿಯನ್ನು ಪ್ರಶಂಸಿಸಿದ ಜಿಲ್ಲಾಧಿಕಾರಿಗಳು, ನೀರಿನ ಲಭ್ಯತೆಯನ್ನು ಸಮರ್ಪಕವಾಗಿ ಬಳಸಿಕೊಂಡು ರೈತರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಟೊಮೆಟೊ ಬೆಳೆಯ ಮಾರುಕಟ್ಟೆ ಏರಿಳಿತಗಳ ನಡುವೆಯೂ ಎದೆಗುಂದದೆ, ಹೂವಿನ ಕೃಷಿಯಂತಹ ಪರ್ಯಾಯ ಹಾಗೂ ಲಾಭದಾಯಕ ಬೆಳೆಗಳತ್ತ ಮುಖಮಾಡಿರುವುದು ಅವರ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ ಎಂದರು.
ರೈತರ ವಿಚಾರದಲ್ಲಿ ಬ್ಯಾಂಕ್ಗಳು ಹೆಚ್ಚು ಸ್ಪಂದನಾಶೀಲವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯ ಸರ್ಕಾರದ ನಿರ್ದೇಶನದಂತೆ, ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದ0ತೆ ಬ್ಯಾಂಕ್ ಅಧಿಕಾರಿಗಳು ಮಾನವೀಯ ದೃಷ್ಟಿಕೋನದಿಂದ ನಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸರ್ಕಾರದಿಂದ ರೈತರ ಕಲ್ಯಾಣಕ್ಕಾಗಿ ಬಿಡುಗಡೆಯಾಗುವ ವಿವಿಧ ಯೋಜನೆಗಳ ಅನುದಾನವನ್ನು ಬ್ಯಾಂಕ್ಗಳು ರೈತರ ಹಳೆಯ ಸಾಲದ ಬಾಕಿಗೆ ಕಡಿತಗೊಳಿಸಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಒಂದು ವೇಳೆ ಸರ್ಕಾರದ ಅನುದಾನವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡರೆ, ಅಂತಹ ಬ್ಯಾಂಕ್ಗಳಲ್ಲಿರುವ ಸರ್ಕಾರದ ಖಾತೆಗಳನ್ನು ಬೇರೆ ಬ್ಯಾಂಕ್ಗಳಿಗೆ ವರ್ಗಾಯಿಸುವ ಅನಿವಾರ್ಯ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ರೈತರು ಬ್ಯಾಂಕ್ಗೆ ಆಗಮಿಸಿದಾಗ ಅವರಿಗೆ ಅನಗತ್ಯ ಅಲೆದಾಟ ತಪ್ಪಿಸಿ, ಬ್ಯಾಂಕಿ0ಗ್ ಸೇವೆಗಳು ಸುಲಭವಾಗಿ ಹಾಗೂ ತ್ವರಿತವಾಗಿ ದೊರೆಯುವಂತೆ ನೋಡಿಕೊಳ್ಳಬೇಕೆಂದು ಅವರು ಎಲ್ಲಾ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್