
ಬಾಗಲಕೋಟೆ, 17 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ್ ಮತಕ್ಷೇತ್ರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಸಂಭ್ರಮದಿಂದ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಸಿದ್ದು ಸವದಿ ಅವರು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಯಿಂದ ಆತ್ಮೀಯ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಸಕರಿಗೆ ಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸಿದರು.
ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಶಾಸಕ ಸಿದ್ದು ಸವದಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಕಾಲೇಜು ಜೀವನವು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದ ಪ್ರಮುಖ ಹಂತವಾಗಿದ್ದು, ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ಹೊಸ ವಾತಾವರಣಕ್ಕೆ ಆತ್ಮೀಯವಾಗಿ ಹೊಂದಿಕೊಳ್ಳುವಂತೆ ಶುಭ ಹಾರೈಸಿದ ಅವರು, ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಹಾಗೂ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತಹ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡದ ಮನೋಭಾವ, ನಾಯಕತ್ವ ಗುಣ ಹಾಗೂ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗುತ್ತವೆ. ಅದೇ ರೀತಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಮತ್ತು ಪ್ರತಿಭೆಯನ್ನು ಹೊರತರುವ ವೇದಿಕೆಯಾಗಿವೆ. ಕಾಲೇಜು ಹಂತದಲ್ಲಿಯೇ ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಹೊಸ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande