
ಬಾಗಲಕೋಟೆ, 17 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ :;ದೇಶ ಮೊದಲು’ ಎಂಬ ನಿಷ್ಠೆ ಹಾಗೂ ಜನಸೇವೆಯ ಸಂಕಲ್ಪದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಹೇರೂರು ಗ್ರಾಮದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಹುನಗುಂದ ಮತಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರು ಹೇರೂರು ಗ್ರಾಮದ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ದೇಶದ ಅಭಿವೃದ್ಧಿ, ಜನಕಲ್ಯಾಣ ಹಾಗೂ ರಾಷ್ಟ್ರಸೇವೆಯ ಸಂಕಲ್ಪ ಮತ್ತಷ್ಟು ಬಲಗೊಳ್ಳಲಿ ಎಂದು ಪ್ರಾರ್ಥಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ಹೇರೂರು ಗ್ರಾಮದಲ್ಲಿಯೂ ಧಾರ್ಮಿಕ ಹಾಗೂ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದೊಡ್ಡನಗೌಡ ಜಿ. ಪಾಟೀಲ ಅವರು, ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನವು ರಾಷ್ಟ್ರಸೇವೆ ಮತ್ತು ಜನಕಲ್ಯಾಣದ ಸಂಕಲ್ಪಕ್ಕೆ ಒತ್ತು ನೀಡಿರುವುದಾಗಿ ಹೇಳಿದರು. ದೇಶದ ಅಭಿವೃದ್ಧಿ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೆ ಸರ್ಕಾರದ ಯೋಜನೆಗಳು ತಲುಪುವ ನಿಟ್ಟಿನಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶ ಹೊಂದಲಾಗಿದೆ. ಜನಸೇವೆ, ಪರಿಸರ ಸಂರಕ್ಷಣೆ, ಆರೋಗ್ಯ, ಸ್ವಚ್ಛತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವಾ ಚಟುವಟಿಕೆಗಳನ್ನು ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಪಕ್ಷದ ಮುಖಂಡರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೇರೂರು ಗ್ರಾಮದ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು, ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande