
ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಹಾಗೂ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಕಚೇರಿಯ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 20 ರವರೆಗೆ ಜಿಲ್ಲೆಯಾದ್ಯಂತ ‘ವಿಶ್ವ ರೋಗಿಗಳ ಸುರಕ್ಷತಾ ದಿನ’ದ ಅಂಗವಾಗಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಅಲಕನಂದ ಡಿ.ಮಾಳಗಿ ಅವರು ತಿಳಿಸಿದ್ದಾರೆ.
ಈ ವರ್ಷ ‘ಸಾಂಕ್ರಾಮಿಕವಲ್ಲದ ರೋಗಗಳಿಗೆ ಸುರಕ್ಷಿತ ಆರೈಕೆ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಜಿಲ್ಲೆಯ ವಿವಿಧ ಉಪಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರಗಳು ನಡೆಯಲಿವೆ.
ದೀರ್ಘಕಾಲೀನ ಕಾಯಿಲೆಗಳಿಗೆ ನಿರಂತರ ಆರೈಕೆ: ಮಧುಮೇಹ, ಹೃದಯರೋಗ, ಕ್ಯಾನ್ಸರ್ ಮುಂತಾದ ದೀರ್ಘಕಾಲೀನ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸುರಕ್ಷಿತ, ನಿರಂತರ ಮತ್ತು ಸಮನ್ವಯಿತ ಆರೋಗ್ಯ ಸೇವೆ ಒದಗಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ.
ಚಿಕಿತ್ಸೆಯ ದೋಷಗಳಿಂದಾಗುವ ಹಾನಿ ತಡೆಗಟ್ಟುವುದು: ಆರೋಗ್ಯ ಸೇವೆಯ ಪ್ರತಿಯೊಂದು ಹಂತದಲ್ಲೂ ರೋಗಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಔಷಧಿ ಮತ್ತು ಚಿಕಿತ್ಸೆಯ ಲೋಪಗಳಿಂದ ಉಂಟಾಗಬಹುದಾದ ಹಾನಿಯನ್ನು ತಪ್ಪಿಸುವುದು. ರೋಗಿಗಳು ಮತ್ತು ಅವರ ಕುಟುಂಬಸ್ಥರನ್ನು ಚಿಕಿತ್ಸಾ ನಿರ್ಧಾರಗಳಲ್ಲಿ ಸಕ್ರಿಯವಾಗಿ ಒಳಗೊಳ್ಳುವಂತೆ ಮಾಡುವುದು. ಆರೋಗ್ಯ ಸಿಬ್ಬಂದಿ ಹಾಗೂ ರೋಗಿಗಳ ನಡುವೆ ಸ್ಪಷ್ಟ ಮತ್ತು ವಿಶ್ವಾಸಾರ್ಹ ಸಂವಹನ ಬೆಳೆಸುವುದಾಗಿದೆ.
ಕಾರ್ಯಕ್ರಮದ ಅಂಗವಾಗಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಭವನದಲ್ಲಿ ಸಿಬ್ಬಂದಿಗಳಿಗೆ ಈ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಸಾರ್ವಜನಿಕರು ಈ ಅವಧಿಯಲ್ಲಿ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸುರಕ್ಷಿತವಾಗಿ ಬಾಳುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಮತ್ತು ಈ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಹೆಚ್ಒ ಅವರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್