
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:
ಕರೆ ಮಾಡಿದಾಗ ಪತ್ನಿ ಫೋನ್ ಸ್ವೀಕರಿಸುತ್ತಿಲ್ಲ ಎಂಬ ಕಾರಣಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಳ್ಳಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತಿ ರಂಜಿತ್ ಕುಮಾರ್ ಗುಪ್ತಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಮಹಿಳೆಯನ್ನು 38 ವರ್ಷದ ಗುಂಜಾ ಮದೇಷಿಯಾ ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ದಂಪತಿ ಬಿಳೇಕಳ್ಳಿಯಲ್ಲಿ ವಾಸವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಗುರುವಾರ ಮಕ್ಕಳು ಶಾಲೆಗೆ ತೆರಳಿದ್ದ ಸಂದರ್ಭದಲ್ಲಿ, ತಾನು ಕರೆ ಮಾಡಿದಾಗ ಪತ್ನಿ ಕರೆ ಸ್ವೀಕರಿಸುತ್ತಿಲ್ಲ ಎಂದು ರಂಜಿತ್ ಕುಮಾರ್ ಗುಪ್ತಾ ಆಕ್ಷೇಪಿಸಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಬಳಿಕ ಜಗಳ ತೀವ್ರಗೊಂಡಿದ್ದು, ಮಹಿಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆ ಮರೆಮಾಚಲು ಯತ್ನ:ಪತ್ನಿಯ ಸಾವಿನ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಆರೋಪಿ ಅಡುಗೆ ಎಣ್ಣೆಯನ್ನು ಕಾಯಿಸಿ ಮೃತದೇಹದ ಮೇಲೆ ಸುರಿದು, ಘಟನೆ ಅಪಘಾತದಂತೆ ಕಾಣುವಂತೆ ಮಾಡಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.
ದಂಪತಿ ನಡುವೆ ನಡೆದ ಜಗಳವನ್ನು ಗಮನಿಸಿದ್ದ ನೆರೆಹೊರೆಯವರು ಮಹಿಳೆ ಕಾಣಿಸದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೈಕೋಲೇಔಟ್ ಪೊಲೀಸರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ವಿಚಾರಣೆ ವೇಳೆ ರಂಜಿತ್ ಕುಮಾರ್ ಗುಪ್ತಾ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R