ಮಂಗಳೂರು ವಿವಿ ಸಂಶೋಧನಾ ಕೇಂದ್ರ ಸದ್ಬಳಕೆಗೆ ಸರ್ಕಾರದ ಚಿಂತನೆ:ಡಾ.ಪರಮೇಶ್ವರ
ಕಟ್ಟಡವನ್ನು ಕ್ರೀಡಾ ವಿಶ್ವವಿದ್ಯಾನಿಲಯ ಅಥವಾ ವೈದ್ಯಕೀಯ ಕಾಲೇಜಿಗೆ ಬಳಸುವ ಸಾಧ್ಯತೆ ಪರಿಶೀಲನೆ: ಡಾ. ಜಿ. ಪರಮೇಶ್ವರ
DCM


ಉಡುಪಿ, 18 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಕಾಪು ತಾಲ್ಲೂಕಿನ ಬೆಳಪು ಗ್ರಾಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರದ ಕಟ್ಟಡ ಹಾಗೂ ಕ್ಯಾಂಪಸ್ ಅನ್ನು ಸೂಕ್ತ ಮತ್ತು ಸದ್ಬಳಕೆಯ ಉದ್ದೇಶಕ್ಕಾಗಿ ಬಳಸಿಕೊಳ್ಳುವ ಕುರಿತು ಸರ್ಕಾರದ ಹಂತದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಸುಮಾರು ₹53.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಬೃಹತ್ ಕಟ್ಟಡವು ಕೆಲ ವರ್ಷಗಳಿಂದ ಬಳಕೆಯಾಗದೆ ಖಾಲಿ ಉಳಿದಿದ್ದು, ದುರಾವಸ್ಥೆಗೆ ತಲುಪುವ ಭೀತಿಯಲ್ಲಿದೆ. ಕಟ್ಟಡ ಹಾಗೂ ಕ್ಯಾಂಪಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

2014-15ನೇ ಸಾಲಿನ ಬಜೆಟ್‌ನಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವ ಕುರಿತು ಘೋಷಿಸಲಾಗಿತ್ತು. ಕೇಂದ್ರ ಸರ್ಕಾರದ ರೂಸಾ ಯೋಜನೆಯಡಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರೂಸಾ ಅನುದಾನದ ಮೂಲಕ ಕಾರ್ಯಕ್ರಮ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು. ರಾಜ್ಯದಲ್ಲಿ ಎರಡು ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದ್ದು, ಅದರಲ್ಲಿ ಒಂದನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಆಯ್ಕೆ ಮಾಡಲಾಗಿತ್ತು. ಅಗತ್ಯ ಮೂಲಸೌಕರ್ಯಗಳ ನಕ್ಷೆ ಸಿದ್ಧಪಡಿಸಿ, ಅವಶ್ಯಕತೆಗಳ ಕುರಿತು ಚರ್ಚಿಸಿ ಅನುಮೋದನೆ ಪಡೆದ ಬಳಿಕ ಕಾಮಗಾರಿ ಆರಂಭಿಸಲಾಗಿತ್ತು. ಸುಮಾರು ₹50ರಿಂದ ₹60 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಕಾರಣಾಂತರಗಳಿಂದ ರೂಸಾ ಕಾರ್ಯಕ್ರಮ ಸ್ಥಗಿತಗೊಂಡಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಿಂದಲೂ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವಿಜ್ಞಾನ ಕೇಂದ್ರದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದೀಗ ವಿಜ್ಞಾನ ಕೇಂದ್ರಕ್ಕೆ ಚಾಲನೆ ನೀಡುವ ಕುರಿತು ಪ್ರಸ್ತಾಪ ಮಾಡಲಾಗಿದ್ದು, ಈ ವಿಚಾರ ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ಬಂದಿದೆ ಎಂದರು.

ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪಿಸುವ ಚಿಂತನೆಯಿದ್ದು, ಅದನ್ನು ಇಲ್ಲಿ ಸ್ಥಾಪಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಲು ಭೇಟಿ ನೀಡಿದ್ದೇನೆ. ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಇಲ್ಲದಿರುವ ಹಿನ್ನೆಲೆಯಲ್ಲಿ ಅದಕ್ಕೂ ಇಲ್ಲಿ ಸಾಧ್ಯತೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಡಾ. ಪರಮೇಶ್ವರ ಹೇಳಿದರು.

ಈ ಎಲ್ಲ ವಿಚಾರಗಳ ಕುರಿತು ಮಾಹಿತಿ ಪಡೆದು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಒಟ್ಟಾರೆ, ಇಲ್ಲಿ ನಿರ್ಮಿಸಿರುವ ಕಟ್ಟಡಗಳು ಹಾಗೂ ಅಭಿವೃದ್ಧಿಪಡಿಸಿರುವ ಕ್ಯಾಂಪಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರದ ಹಂತದಲ್ಲಿ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರಾವಳಿ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ

ಕರಾವಳಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಹಲವು ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ತಿಳಿಸಿದರು.

ಈಗಾಗಲೇ ಸರ್ಕಾರದ ಗಮನಕ್ಕೆ ಬಂದಿರುವ ಕೆಲವು ಸಮಸ್ಯೆಗಳಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಇನ್ನೂ ಹಲವು ಸಮಸ್ಯೆಗಳು ಹಾಗೂ ವಿವಿಧ ವಿಚಾರಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಅವುಗಳ ಕುರಿತು ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.

ಕರಾವಳಿ ಭಾಗವನ್ನು ಕೇರಳ ಹಾಗೂ ಗೋವಾ ರಾಜ್ಯಗಳು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ. ಅದೇ ರೀತಿ ಕರ್ನಾಟಕದ ಕರಾವಳಿ ಭಾಗವನ್ನೂ ಇನ್ನಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಸರ್ಕಾರಕ್ಕಿದೆ. ಉಡುಪಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರವಾಸೋದ್ಯಮ ಬೆಳೆಸಿದರೆ ಉದ್ಯೋಗ ಸೃಷ್ಟಿಯ ಜತೆಗೆ ಆರ್ಥಿಕ ಚಟುವಟಿಕೆಗಳೂ ಹೆಚ್ಚಲಿವೆ. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ನೀತಿಯ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ದೊಡ್ಡ ಕೈಗಾರಿಕೆಗಳನ್ನು ಕರಾವಳಿ ಭಾಗಕ್ಕೆ ತರುವುದು ಕಷ್ಟವಾಗಬಹುದು. ಆದರೆ ಸಾಫ್ಟ್ ಇಂಡಸ್ಟ್ರಿಗಳನ್ನು ಕರಾವಳಿ ಭಾಗಕ್ಕೆ ತರಲು ಪ್ರಯತ್ನಿಸಲಾಗುವುದು ಎಂದರು.

ಕ್ರೀಡಾಂಗಣಗಳ ಅಭಿವೃದ್ಧಿಗೆ ತೀರ್ಮಾನ

ಕರಾವಳಿ ಭಾಗದಲ್ಲಿ ಉತ್ತಮ ಕ್ರೀಡಾಂಗಣ ವ್ಯವಸ್ಥೆ ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಉಡುಪಿ ಕ್ರೀಡಾಂಗಣ, ಮಂಗಳೂರಿನ ಮಂಗಳ ಕ್ರೀಡಾಂಗಣ ಸೇರಿದಂತೆ ವಿವಿಧ ಕ್ರೀಡಾಂಗಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಡಾ. ಪರಮೇಶ್ವರ ತಿಳಿಸಿದರು.

ಸಚಿವ ಸಂಪುಟದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳು ಅನುಷ್ಠಾನಕ್ಕೆ ಬರುತ್ತವೆ. ಸಚಿವ ಸಂಪುಟದ ತೀರ್ಮಾನವೆಂದರೆ ಅದು ಇಡೀ ಸರ್ಕಾರದ ತೀರ್ಮಾನವಾಗಿದೆ. ಸರ್ಕಾರ ಕೈಗೊಳ್ಳುವ ನಿರ್ಣಯಗಳನ್ನು ಅನುಷ್ಠಾನಗೊಳಿಸಲಾಗುವುದು. ಇಲ್ಲವಾದರೆ ಸಚಿವ ಸಂಪುಟಕ್ಕೆ ಯಾವುದೇ ವಿಚಾರಗಳನ್ನು ತರುವ ಅವಶ್ಯಕತೆಯೇ ಇರುವುದಿಲ್ಲ. ಟೀಕೆ ಮಾಡುವವರು ಇದ್ದೇ ಇರುತ್ತಾರೆ. ಅದನ್ನೆಲ್ಲ ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್, ಬರದ ಕುರಿತು ಚರ್ಚೆ

ಸೆಪ್ಟೆಂಬರ್ 21, 22 ಮತ್ತು 23ರಂದು ವಿಶೇಷ ಅಧಿವೇಶನ ಕರೆಯಲಾಗಿದೆ. ಮೊದಲನೆಯದಾಗಿ ಕಸ್ತೂರಿ ರಂಗನ್ ವರದಿ ವಿಚಾರದ ಬಗ್ಗೆ ಚರ್ಚಿಸಲಾಗುವುದು. ರಾಜ್ಯದಲ್ಲಿ ವಿಪರೀತ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ರೈತರಿಗೆ ಯಾವ ರೀತಿ ಸ್ಪಂದಿಸಬೇಕು ಹಾಗೂ ಯಾವ ರೀತಿಯಲ್ಲಿ ನೆರವು ನೀಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗುವುದು. ರೈತರ ಹಿತದೃಷ್ಟಿಯಿಂದಲೇ ಈ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಡಾ. ಪರಮೇಶ್ವರ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಸಂತೋಷ್ ಬಿ. ಜಗಲಾಸರ್, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ, ಬೆಳಪು ಪಂಚಾಯಿತಿ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಗುತ್ತಿಗೆದಾರ ವಾಸುದೇವ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande