
ಮಂಗಳೂರು, 18 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಬಹುಕಾಲದಿಂದ ಕರಾವಳಿ ಭಾಗದಲ್ಲಿ ಕೇಳಿಬರುತ್ತಿದ್ದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026 ಸೇರಿದಂತೆ ಒಟ್ಟು ₹32,611 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅನುಮೋದನೆ ಪಡೆದ ಯೋಜನೆಗಳ ಪೈಕಿ ₹16,000 ಕೋಟಿ ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ್ದಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದೆ ಎಂದು ತಿಳಿಸಿದರು.
ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಬೇಕೆಂಬ ಬೇಡಿಕೆ ಬಹುಕಾಲದಿಂದ ಇತ್ತು. ರಾಜ್ಯ ಸರ್ಕಾರ ಜನರ ಭಾವನೆಯನ್ನು ಗೌರವಿಸಿ ಈ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.
“ಹಿಂದಿನವರು ಈ ತೀರ್ಮಾನ ಏಕೆ ಮಾಡಲಿಲ್ಲ ಎಂಬುದನ್ನು ಚರ್ಚಿಸುವುದಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಸಭೆಯಲ್ಲಿ ಈ ವಿಚಾರದ ಕುರಿತು ಅನೇಕ ಸಲಹೆಗಳು ಬಂದಿವೆ,” ಎಂದು ಅವರು ಹೇಳಿದರು.
ಸರ್ಕಾರಕ್ಕೆ ಬದ್ಧತೆ ಇದೆ. ಜನರ ಭಾವನೆಗಳ ಮೇಲೆ ಮಾತ್ರವಲ್ಲ, ಬದುಕಿನ ಮೇಲೆ ರಾಜಕಾರಣ ಮಾಡಲಾಗುತ್ತಿದೆ. ಭಾವನೆಗಳ ಆಧಾರದ ಮೇಲೆ ಸಮಾಜ ಕಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ತುಂಬಿ ಜನರ ಬದುಕು ಕಟ್ಟಿಕೊಡುವುದು ಸರ್ಕಾರದ ಉದ್ದೇಶ ಎಂದು ಅವರು ವಿವರಿಸಿದರು.
ಅಗತ್ಯವಿರುವ ಕಡೆ ಆರ್ಥಿಕ ಮತ್ತು ಕಾನೂನು ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆ ನಡೆಸಿ ಅಗತ್ಯ ವಿಚಾರಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಇದು ತಂಡ ಕರ್ನಾಟಕ. ಸಚಿವ ಸಂಪುಟ ಜನರೊಂದಿಗೆ ಇದೆ ಎಂದು ಮುಖ್ಯಮಂತ್ರಿ ಹೇಳಿದರು.
ತುಳು ಭಾಷೆಯನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮಾಜಿ ಸಚಿವ ರಮಾನಾಥ ರೈ ಅವರು ತುಳು ಭಾಷೆಗೆ ಎರಡನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯನ್ನು ಮೊದಲು ಮುಂದಿಟ್ಟಿದ್ದರು. ಸಚಿವ ಯು.ಟಿ. ಖಾದರ್, ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಈ ವಿಚಾರದಲ್ಲಿ ಒಟ್ಟಾಗಿ ಒತ್ತಡ ಹೇರಿದ್ದರು ಎಂದು ಮುಖ್ಯಮಂತ್ರಿ ಸ್ಮರಿಸಿದರು.
ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅವರು ಅಭಿನಂದನೆ ಸಲ್ಲಿಸಿದರು.
ದಕ್ಷಿಣ ಕನ್ನಡಕ್ಕೆ ‘ಮಂಗಳೂರು’ ಮರುನಾಮಕರಣ: ಜನಾಭಿಪ್ರಾಯಕ್ಕೆ ಒತ್ತು
ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರುನಾಮಕರಣ ಮಾಡುವ ಪ್ರಸ್ತಾವದ ಬಗ್ಗೆಯೂ ಮುಖ್ಯಮಂತ್ರಿ ಮಾತನಾಡಿದರು.
ಮಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ನಗರವಾಗಿದೆ. ದಕ್ಷಿಣ ಕನ್ನಡದ ಬದಲಿಗೆ ಮಂಗಳೂರು ಎಂದು ಹೆಸರಿಸುವ ಕುರಿತು ಜನಾಭಿಪ್ರಾಯ ಪಡೆಯಲಾಗುವುದು. ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು. ಈ ಅವಧಿಯಲ್ಲಿ ಜನರ ಭಾವನೆ ಮತ್ತು ಅಭಿಪ್ರಾಯಗಳನ್ನು ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ
ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈವರೆಗೆ ಜಾರಿಯಲ್ಲಿದ್ದ ಪ್ರವಾಸೋದ್ಯಮ ನೀತಿಗಳಿಗಿಂತ ಭಿನ್ನವಾದ ರೀತಿಯಲ್ಲಿ ಹೊಸ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಹೂಡಿಕೆದಾರರಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು, ಸಾಲ ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವುದು ಸೇರಿದಂತೆ ಹಲವು ಪ್ರೋತ್ಸಾಹಕ ಕ್ರಮಗಳನ್ನು ನೀತಿಯಲ್ಲಿ ಅಳವಡಿಸಲಾಗುವುದು. ಮಲೆನಾಡು ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಿ ಉತ್ತೇಜನ ನೀಡಲಾಗುವುದು ಎಂದು ಅವರು ತಿಳಿಸಿದರು.
ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ
ಮೀನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ಮತ್ತು ನೀಲಿ ಆರ್ಥಿಕತೆಯ ವಿಶ್ವವಿದ್ಯಾಲಯ ಸ್ಥಾಪಿಸುವ ಉದ್ದೇಶವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಪ್ರಸ್ತುತ ಇರುವ ಮೀನುಗಾರಿಕಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಾಮರ್ಥ್ಯವನ್ನು 60ರಿಂದ 200ಕ್ಕೆ ಹೆಚ್ಚಿಸಲಾಗುವುದು. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ 150 ಎಕರೆ ಪ್ರದೇಶದಲ್ಲಿ ಮೀನುಗಾರಿಕಾ ಪಾರ್ಕ್ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.
ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು
ಈ ಭಾಗದಲ್ಲಿ ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆ ಸ್ಥಾಪನೆಗೆ ಬೇಡಿಕೆಗಳು ಬಂದಿವೆ ಎಂದು ಮುಖ್ಯಮಂತ್ರಿ ತಿಳಿಸಿದರು. ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹549 ಕೋಟಿ ಅನುಮೋದನೆ ನೀಡಲಾಗಿದೆ ಎಂದರು.
ಗ್ರಾಮೀಣ ಸಂಪರ್ಕ, ಮೂಲಸೌಕರ್ಯಕ್ಕೆ ₹16,000 ಕೋಟಿ
ಸಚಿವ ಸಂಪುಟ ಸಭೆಯಲ್ಲಿ ಗ್ರಾಮೀಣ ಸಂಪರ್ಕ ರಸ್ತೆ ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಟ್ಟು ₹16,000 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಒಟ್ಟು ₹32,611 ಕೋಟಿ ಯೋಜನೆಗಳ ಪೈಕಿ ₹16,000 ಕೋಟಿ ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.
ಮುಂದಿನ 15 ತಿಂಗಳಲ್ಲಿ 10-12 ಕಡೆ ಸಚಿವ ಸಂಪುಟ ಸಭೆ
ಬೆಂಗಳೂರಿನ ಹೊರಗೆ ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಲ್ಲೂ ಇಂತಹ ಸಭೆ ನಡೆಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಮುಂದಿನ 15 ತಿಂಗಳ ಅವಧಿಯಲ್ಲಿ ರಾಜ್ಯದ 10ರಿಂದ 12 ಸ್ಥಳಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ಉದ್ದೇಶವಿದೆ ಎಂದು ತಿಳಿಸಿದರು.
ಎಲ್ಲಿ ಸಾಮರ್ಥ್ಯವಿದೆ ಮತ್ತು ಅಗತ್ಯವಿದೆ ಎಂಬುದನ್ನು ಪರಿಗಣಿಸಿ ಅಲ್ಲಿಯೇ ಸಚಿವ ಸಂಪುಟ ಸಭೆ ನಡೆಸಲಾಗುವುದು. ಸಮಗ್ರ ಕರ್ನಾಟಕ, ಸಮೃದ್ಧ ಕರ್ನಾಟಕ ನಿರ್ಮಾಣ ಮಾಡುವುದು ಸರ್ಕಾರದ ಗುರಿ ಎಂದು ಹೇಳಿದರು.
ಅಭಿವೃದ್ಧಿ ಯೋಜನೆಗಳು ರಾಜ್ಯದ ಇತರ ಭಾಗಗಳಿಗೂ ವಿಸ್ತರಣೆ
ಕರಾವಳಿ ಜಿಲ್ಲೆಗಳಿಗೆ ವಿವಿಧ ಆಯಾಮಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ನೀಡಲಾಗುತ್ತಿದ್ದು, ಇವುಗಳನ್ನು ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲಾಗುವುದೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಖಂಡಿತವಾಗಿಯೂ ವಿಸ್ತರಿಸಲಾಗುವುದು ಎಂದು ಉತ್ತರಿಸಿದರು.
ದಕ್ಷಿಣ ಕನ್ನಡ ಧಾರ್ಮಿಕವಾಗಿ ಮತ್ತು ಶೈಕ್ಷಣಿಕವಾಗಿ ದೇಶದ ಗಮನ ಸೆಳೆದ ಜಿಲ್ಲೆ. ದೇಶಕ್ಕೆ ಆರು ರಾಷ್ಟ್ರೀಕೃತ ಬ್ಯಾಂಕುಗಳನ್ನು ನೀಡಿರುವ ಆರ್ಥಿಕ ಶಕ್ತಿಯ ಪ್ರದೇಶ ಇದಾಗಿದೆ. ಇಲ್ಲಿ ಬಂದರುಗಳಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಮುಖ ಕೇಂದ್ರವೂ ಆಗಿದೆ ಎಂದು ಅವರು ವಿವರಿಸಿದರು.
ಕಸ್ತೂರಿರಂಗನ್ ವರದಿ ಕುರಿತು ಜನಾಭಿಪ್ರಾಯ
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಬಳಿಕ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಜನರ ಅಭಿಪ್ರಾಯ ಪಡೆಯಲಾಗುವುದು ಎಂದರು.
ದಕ್ಷಿಣ ಕನ್ನಡದ ಜನತೆಗೆ ಕೃತಜ್ಞತೆ
ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರು ತೋರಿದ ಅಭಿಮಾನ ಮತ್ತು ಸ್ವಾಗತಕ್ಕೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿರುವ ಜಿಲ್ಲೆ. ಇಡೀ ದೇಶವೇ ದಕ್ಷಿಣ ಕನ್ನಡದ ಇತಿಹಾಸ ಮತ್ತು ಪರಂಪರೆಯನ್ನು ತಿಳಿದಿದೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ತನ್ನ ಕೊಡುಗೆ ನೀಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ ಎಂದು ಹೇಳಿದರು.
ಪಕ್ಷಭೇದ ಮರೆತು ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.
ತುಳು ಭಾಷೆಯ ಕುರಿತ ಭಾವನೆ ದೊಡ್ಡದು
ತುಳು ಭಾಷೆಯನ್ನು ಆಡಳಿತ ಭಾಷೆಯಾಗಿ ಘೋಷಿಸುವ ಕುರಿತು ಈ ಭಾಗದ ಜನರ ಭಾವನೆ ಮತ್ತು ಒತ್ತಡದ ಕುರಿತು ಮಾತನಾಡಿದ ಮುಖ್ಯಮಂತ್ರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಶಾಸಕರಾದ ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಕೇಳಿದ ಮೊದಲ ಪ್ರಶ್ನೆ ತುಳು ಭಾಷೆಗೆ ಸಂಬಂಧಿಸಿದ್ದಾಗಿತ್ತು ಎಂದು ಸ್ಮರಿಸಿದರು.
ಅವರ ಮೊದಲ ಭಾವನೆ ಭಾಷೆಯ ಮೇಲಿತ್ತು. ಬಳಿಕ ಅವರು ವೈದ್ಯಕೀಯ ಕಾಲೇಜಿಗೆ ಸುಮಾರು ₹500 ಕೋಟಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು. ಅಂದು ಯು.ಟಿ. ಖಾದರ್ ವಿಧಾನಸಭಾಧ್ಯಕ್ಷರಾಗಿದ್ದರು. ಇಬ್ಬರೂ ತುಳುವಿನಲ್ಲಿ ಮಾತನಾಡುತ್ತಾ, ಇತರ ಜನಪ್ರತಿನಿಧಿಗಳೊಂದಿಗೆ ಸೇರಿ ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ನೀಡುವಂತೆ ಒತ್ತಡ ಹೇರಿದ್ದರು ಎಂದು ಅವರು ಸ್ಮರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.