
ಬೀದರ್, 19 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನರ್ ಆರಂಭಕ್ಕೆ ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಭೀಮರಾವ್ ಬಿ. ಪಾಟೀಲ್ ಅವರು ಶನಿವಾರ ಪಾದಯಾತ್ರೆ ಆರಂಭಿಸಿದರು.
ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ಕೇಶವ ಹನುಮಾನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಬೀದರ್ನಿಂದ ತೆಲಂಗಾಣದ ಜಹೀರಾಬಾದ್ ಸಮೀಪದ ರೆಜಂತಲ್ ಸಿದ್ಧಿವಿನಾಯಕ್ ದೇವಸ್ಥಾನದವರೆಗೆ ಅವರು ಕಾಲ್ನಡಿಗೆಯಲ್ಲಿ ತೆರಳಲಿದ್ದಾರೆ.ಬರದ ಪರಿಣಾಮ ಕಬ್ಬು ಬೆಳೆಗಾರರು ಸೇರಿದಂತೆ ಜಿಲ್ಲೆಯ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ರೈತರ ಬದುಕಿಗೆ ಆಸರೆಯಾಗಿರುವ BSSK ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸುವ ಮೂಲಕ ರೈತರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಭೀಮರಾವ್ ಪಾಟೀಲ್ ತಿಳಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಅವರು ಪಾದಯಾತ್ರೆ ನಡೆಸಿದ ಬೆನ್ನಲ್ಲೇ ಭೀಮರಾವ್ ಪಾಟೀಲ್ ಅವರ ಪಾದಯಾತ್ರೆ ಆರಂಭವಾಗಿರುವುದು ಹುಮನಾಬಾದ್ ಕ್ಷೇತ್ರದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕ್ಷೇತ್ರದಲ್ಲಿ ಪಾಟೀಲ್ ವರ್ಸಸ್ ಪಾಟೀಲ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ ಇಬ್ಬರೂ ನಾಯಕರು ರೈತರ ವಿಚಾರವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಭೀಮರಾವ್ ಪಾಟೀಲ್ “ಬರದ ಹೊಡೆತದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ BSSK ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸಬೇಕು. ರೈತರ ಸಂಕಷ್ಟ ನಿವಾರಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R