
ಬೀದರ್, 19 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನೆ ಶನಿವಾರ ಅದ್ಧೂರಿಯಾಗಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಿ, ವಿಘ್ನ ನಿವಾರಕ ಶ್ರೀ ಗಣೇಶನಿಗೆ ಭಾವಪೂರ್ಣವಾಗಿ ಬೀಳ್ಕೊಟ್ಟರು.
ನಗರದಲ್ಲಿ ಈ ಬಾರಿ 170ಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, 60ಕ್ಕೂ ಹೆಚ್ಚು ಬೃಹತ್ ಗಣೇಶ ಮೂರ್ತಿಗಳೂ ಇದ್ದವು. ಅವುಗಳ ಪೈಕಿ ಸುಮಾರು 40ರಿಂದ 50 ಬೃಹತ್ ಮೂರ್ತಿಗಳನ್ನು ವಿವಿಧ ಬಡಾವಣೆಗಳಿಂದ ಮೆರವಣಿಗೆ ಮೂಲಕ ವಿಸರ್ಜನಾ ಸ್ಥಳಕ್ಕೆ ಕೊಂಡೊಯ್ಯಲಾಯಿತು.
ಕೆಎಚ್ಬಿ ಕಾಲೊನಿ, ಗುಂಪಾ, ಮೈಲೂರು, ನೌಬಾದ್, ಮಂಗಲಪೇಟೆ ಹಾಗೂ ಚಿಕ್ಕಪೇಟೆ ಸೇರಿದಂತೆ ವಿವಿಧೆಡೆಯಿಂದ ಗಣೇಶ ಮೂರ್ತಿಗಳ ಮೆರವಣಿಗೆ ನಡೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಚೌಬಾರ ಮಾರ್ಗವಾಗಿ ವಿಸರ್ಜನಾ ಸ್ಥಳದತ್ತ ತೆರಳಿತು.
ವಿಸರ್ಜನಾ ಮೆರವಣಿಗೆಯಲ್ಲಿ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಗಣೇಶ ಭಕ್ತರು ಡಿಜೆ ಹಾಡುಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಮಧ್ಯಾಹ್ನದಿಂದಲೇ ಹಲವು ಕಡೆ ಗಣೇಶ ಮೂರ್ತಿಗಳ ವಿಸರ್ಜನೆ ಆರಂಭವಾಗಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಈಶ್ವರ ಖಂಡ್ರೆ ಅವರು ಮಾತನಾಡಿ, ಗಣೇಶ ಚತುರ್ಥಿ ಭಕ್ತಿಭಾವ ಮತ್ತು ಸೌಹಾರ್ದತೆಯೊಂದಿಗೆ ಆಚರಿಸುವ ಹಬ್ಬವಾಗಿದ್ದು, ಎಲ್ಲರೂ ಶಾಂತಿಯುತವಾಗಿ ವಿಸರ್ಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ವಿಸರ್ಜನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅಲ್ಲದೆ, ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿತ್ತು.
--------------
ಹಿಂದೂಸ್ತಾನ್ ಸಮಾಚಾರ್ / BHARGAVI G R