






ತೋರಣಗಲ್ಲು, 19 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳನ್ನು ನೇರವಾಗಿ ಜನರ ಮನೆಬಾಗಿಲಿಗೆ ತಲುಪಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ನಡೆಯಿತು.
ತೋರಣಗಲ್ಲು ಹೋಬಳಿ ವ್ಯಾಪ್ತಿಯ ವಿಠಲಾಪುರದಲ್ಲಿ ಸಂಡೂರು ತಾಲ್ಲೂಕು ಆಡಳಿತ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಚಾಲನೆ ನೀಡಿ, ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಆಂದೋಲನ ಆರಂಭಿಸಲಾಗಿದೆ. ಮಾಹಿತಿ ಕೊರತೆಯಿಂದಾಗಿ ಹಲವು ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕೆಲವರು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಹಿಂಜರಿಯುತ್ತಾರೆ. ಅಂತಹವರಿಗೆ ನೆರವಾಗಲು ಮತ್ತು ನಾಗರಿಕರೊಂದಿಗೆ ನೇರ ಸಂಪರ್ಕ ಸಾಧಿಸಲು ಪ್ರಜಾಸೇವೆ ಆಂದೋಲನ ಪರಿಣಾಮಕಾರಿ ವೇದಿಕೆಯಾಗಿದೆ ಎಂದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಶೀಘ್ರವಾಗಿ ಬಗೆಹರಿಸುವುದೇ ಈ ಆಂದೋಲನದ ಪ್ರಮುಖ ಉದ್ದೇಶ. ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಜನರ ಅಹವಾಲುಗಳನ್ನು ಸ್ವೀಕರಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ವಿಠಲಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಶಾಸಕರು ಹಾಗೂ ಅಧಿಕಾರಿಗಳ ಮುಂದಿಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್ಗಳನ್ನು ತೆರೆದು, ಸಾರ್ವಜನಿಕರಿಗೆ ಯೋಜನೆಗಳು, ಸೌಲಭ್ಯಗಳು ಹಾಗೂ ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ನೀಡಲಾಯಿತು. ಸ್ಥಳದಲ್ಲೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಹಲವು ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಪರಿಹಾರ ಒದಗಿಸಿದರು.
ಈ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಸಂಡೂರು ತಹಶೀಲ್ದಾರ್ ಜಿ. ಅನಿಲ್ಕುಮಾರ್, ಸಂಡೂರು ತಾಪಂ ಇಒ ಮಡಗಿನ ಬಸಪ್ಪ ಸೇರಿಂದತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ- ಸಿಬ್ಬಂದಿ ಹಾಗೂ ಸಾರ್ವಜನಿಕರು, ಇನ್ನೀತರರು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್