
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಉದ್ಯಾನವನಗಳ ಭೂಮಿಯ ಬಳಕೆಗೆ ಸಂಬಂಧಿಸಿದ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಹಿಂಪಡೆಯಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ.
ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಲಾಲ್‌ಬಾಗ್ ಸೇರಿದಂತೆ ರಾಜ್ಯದ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಸರ್ಕಾರದ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ–2026’ ಅನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಉದ್ಯಾನವನಗಳ ಜಾಗವನ್ನು ಮಾರಾಟ ಮಾಡಲು, ಅಡಮಾನ ಇಡಲು ಅಥವಾ ಒತ್ತುವರಿಗೆ ಅವಕಾಶ ಮಾಡಿಕೊಡುವ ಉದ್ದೇಶ ಸರ್ಕಾರಕ್ಕಿದೆಯೇ ಎಂದು ಪ್ರಶ್ನಿಸಿರುವ ಅಶೋಕ, ಲಾಲ್‌ಬಾಗ್ ಭೂಮಿಯನ್ನು ಸುರಂಗ ರಸ್ತೆ ಸೇರಿದಂತೆ ವಿವಿಧ ಯೋಜನೆಗಳಿಗೆ ಬಳಸುವ ಪ್ರಸ್ತಾವನೆಗೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಎಂದಿದ್ದಾರೆ.
ಜನಾಕ್ರೋಶ ಹಾಗೂ ಬಿಜೆಪಿ ನಡೆಸಿದ ಕಾನೂನು ಹೋರಾಟದ ಹಿನ್ನೆಲೆಯಲ್ಲಿ ಸರ್ಕಾರ ಮರುಪರಿಶೀಲನೆಗೆ ಮುಂದಾಗಿದೆ ಎಂದು ಟೀಕಿಸಿರುವ ಅವರು, ಮರುಪರಿಶೀಲನೆಗಿಂತ ತಿದ್ದುಪಡಿ ವಿಧೇಯಕವನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಆಸ್ತಿ ಮತ್ತು ಹಸಿರು ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಉದ್ಯಾನನಗರಿ ಬೆಂಗಳೂರನ್ನು ರಿಯಲ್ ಎಸ್ಟೇಟ್ ನಗರಿಯನ್ನಾಗಿ ಮಾಡುವ ಪ್ರಯತ್ನವನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಅಶೋಕ ಎಚ್ಚರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.