
ನವದೆಹಲಿ, 02 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್;ಎಐಎಂಐಎಂನ ಮಾಜಿ ವಕ್ತಾರ ಸೈಯದ್ ಆಸಿಮ್ ವಕಾರ್ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೇಂದ್ರ ಪಾಲ್ ಗೌತಮ್, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇಮ್ರಾನ್ ಪ್ರತಾಪ್‌ಗಢಿ ಉಪಸ್ಥಿತರಿದ್ದರು.
ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಕಾರ್, ದೇಶದ ಬಗ್ಗೆ ನಿಜವಾದ ಪ್ರೀತಿ ಇದ್ದು, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಉದ್ದೇಶವಿದ್ದರೆ ಕಾಂಗ್ರೆಸ್‌ನೊಂದಿಗೆ ಕೈಜೋಡಿಸುವುದು ಅಗತ್ಯ ಎಂದರು. ಎಐಎಂಐಎಂನಲ್ಲಿ ಇದ್ದಾಗ ಪಕ್ಷವು ಬಿಜೆಪಿಯ ವಿರುದ್ಧ ಹೋರಾಡುವುದಾಗಿ ಹೇಳುತ್ತಿದ್ದರೂ, ವಾಸ್ತವದಲ್ಲಿ ಬಿಜೆಪಿಯನ್ನು ವಿರೋಧಿಸುವವರ ವಿರುದ್ಧವೇ ಹೋರಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿತ್ತು. ಹೀಗಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾಗಿ ಹೇಳಿದರು.
ರಾಜೇಂದ್ರ ಪಾಲ್ ಗೌತಮ್ ಮಾತನಾಡಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಶಿಕ್ಷಣ, ಉದ್ಯೋಗ, ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಸಮಸ್ಯೆಗಳ ಕುರಿತು ದೇಶಾದ್ಯಂತ ಹೋರಾಟ ನಡೆಯುತ್ತಿದೆ. ರಾಹುಲ್ ಗಾಂಧಿ ಅವರ ವಿಚಾರಧಾರೆಯಿಂದ ಪ್ರಭಾವಿತರಾಗಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಅಜಯ್ ರೈ ಅವರು ವಕಾರ್ ಅವರನ್ನು ಸ್ವಾಗತಿಸಿ, ಅವರ ಸೇರ್ಪಡೆಯಿಂದ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದರು. 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರತಿ ಗ್ರಾಮ ಹಾಗೂ ಬೀದಿಯಲ್ಲಿ ಕಾಂಗ್ರೆಸ್ ಧ್ವಜ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಮ್ರಾನ್ ಪ್ರತಾಪ್‌ಗಢಿ ಮಾತನಾಡಿ, ವಕಾರ್ ಕಾಂಗ್ರೆಸ್ ಕುಟುಂಬ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಮಂದಿ ಕಾಂಗ್ರೆಸ್ ಸೇರಲಿದ್ದು, ಬಿಜೆಪಿಯ ವಿಚಾರಧಾರೆ ವಿರುದ್ಧ ಕಾಂಗ್ರೆಸ್ ಬಲಿಷ್ಠ ಹೋರಾಟ ನಡೆಸಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.