
ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಸವನಳ್ಳಿ ಹಾಗೂ ಗೊಣಸಗಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದ್ದು, ಎರಡೂ ಗ್ರಾಮಗಳ ಹಲವು ಪ್ರಮುಖರು, ಮುಖಂಡರು ಹಾಗೂ ಯುವಕರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಸವನಳ್ಳಿ ಗ್ರಾಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾಬಾಯಿ ಮಮದಾಪುರ ಅವರ ನೇತೃತ್ವದಲ್ಲಿ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ವೇಳೆ ಗೊಣಸಗಿ ಗ್ರಾಮದಲ್ಲಿ 17 ಕುಟುಂಬಗಳು ಒಟ್ಟಾಗಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದು, ಇನ್ನೂ ಹಲವು ಕುಟುಂಬಗಳು ಮುಂದಿನ ದಿನಗಳಲ್ಲಿ ಪಕ್ಷದೊಂದಿಗೆ ಕೈಜೋಡಿಸುವ ವಿಶ್ವಾಸ ವ್ಯಕ್ತಪಡಿಸಿವೆ.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ ಅವರು, ಸವನಳ್ಳಿ ಹಾಗೂ ಗೊಣಸಗಿ ಗ್ರಾಮಗಳ ಪ್ರಮುಖರು, ಮುಖಂಡರು ಮತ್ತು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ. ಪಕ್ಷದ ಮೇಲೆ ಜನರು ಇಟ್ಟಿರುವ ವಿಶ್ವಾಸ ಹಾಗೂ ಬಬಲೇಶ್ವರ ಕ್ಷೇತ್ರದ ಅಭಿವೃದ್ಧಿಯ ಕುರಿತು ಹೊಂದಿರುವ ನಿರೀಕ್ಷೆಗೆ ಇದು ಸಾಕ್ಷಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಎಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸಿದ ಅವರು, ಹೊಸದಾಗಿ ಪಕ್ಷಕ್ಕೆ ಬಂದ ಕಾರ್ಯಕರ್ತರು ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಸವನಳ್ಳಿ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ
ಸವನಳ್ಳಿ ಗ್ರಾಮದಲ್ಲಿ ಪದೇಪದೇ ಎದುರಾಗುತ್ತಿರುವ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಎಂ.ಬಿ. ಪಾಟೀಲ ತಿಳಿಸಿದರು. ಗ್ರಾಮದ ಜನರಿಗೆ ಅಗತ್ಯ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಮೂಲಭೂತ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಅದೇ ರೀತಿ ಗೊಣಸಗಿ ಸೇರಿದಂತೆ ಬಬಲೇಶ್ವರ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುವ ಮೂಲಕ ಜನರ ನೀರಿನ ಸಮಸ್ಯೆ ನಿವಾರಿಸಲು ಆದ್ಯತೆ ನೀಡಲಾಗುವುದು. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಬಬಲೇಶ್ವರ ಕ್ಷೇತ್ರದ ಅಭಿವೃದ್ಧಿಯ ಪಥವನ್ನು ಮತ್ತಷ್ಟು ವೇಗಗೊಳಿಸಲು ಎಲ್ಲರೂ ಪಕ್ಷಾತೀತವಾಗಿ ಸಹಕರಿಸಬೇಕು. ಹೊಸದಾಗಿ ಸೇರ್ಪಡೆಗೊಂಡವರು ಹಾಗೂ ಈಗಾಗಲೇ ಪಕ್ಷದಲ್ಲಿ ಸಕ್ರಿಯರಾಗಿರುವ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಚಿವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande