ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಬೆಳೆ ಸಾಲ ನೀಡಲು ಹಸಿರು ಸೇನೆ ಆಗ್ರಹ
ಬಾಗಲಕೋಟೆ, 21 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಬೆಳೆ ಸಾಲ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ನವನಗರದಲ
ಪ್ರತಿಭಟನೆ


ಬಾಗಲಕೋಟೆ, 21 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಬೆಳೆ ಸಾಲ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ನವನಗರದಲ್ಲಿರುವ ಬಿಡಿಸಿಸಿ ಬ್ಯಾಂಕ್ ಕಚೇರಿ ಮುಂಭಾಗದಲ್ಲಿ ಸಂಘದ ಮುಖಂಡ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ಪಾಲ್ಗೊಂಡು ಸರ್ಕಾರ ಹಾಗೂ ಬ್ಯಾಂಕ್ ಆಡಳಿತದ ವಿರುದ್ಧ ತಮ್ಮ ಬೇಡಿಕೆಗಳನ್ನು ವ್ಯಕ್ತಪಡಿಸಿದರು.

ರೈತರು ಪ್ರತಿವರ್ಷ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿದೆ. ಬೀಜ, ರಸಗೊಬ್ಬರ, ಕೀಟನಾಶಕ, ಕೃಷಿ ಯಂತ್ರೋಪಕರಣ, ಕೂಲಿ ಸೇರಿದಂತೆ ವಿವಿಧ ವೆಚ್ಚಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಇದರೊಂದಿಗೆ ಬರ, ಅತಿವೃಷ್ಟಿ, ಬೆಳೆ ನಷ್ಟ ಹಾಗೂ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೃಷಿ ಸಾಲದ ಮೇಲಿನ ಬಡ್ಡಿಯ ಹೊರೆ ರೈತರಿಗೆ ಮತ್ತಷ್ಟು ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾಕಾರ ಅರವಿಂದ ಕುಲಕರ್ಣಿ ತಿಳಿಸಿದರು.

ಕೃಷಿಕರಿಗೆ ಅಗತ್ಯವಿರುವ ಸಮಯದಲ್ಲಿ ಕಡಿಮೆ ಬಡ್ಡಿದರದಲ್ಲಿ ಹಾಗೂ ಸರಳ ಪ್ರಕ್ರಿಯೆಯ ಮೂಲಕ ಬೆಳೆ ಸಾಲ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಬೆಳೆ ಸಾಲ ನೀಡುವ ವ್ಯವಸ್ಥೆ ಜಾರಿಗೊಳಿಸಿದರೆ ರೈತರು ಖಾಸಗಿ ಸಾಲದಾತರ ಮೊರೆ ಹೋಗುವುದನ್ನು ತಪ್ಪಿಸಬಹುದು. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಹಣಕಾಸಿನ ನೆರವು ದೊರೆತು ರೈತರು ಸ್ವಾವಲಂಬಿಯಾಗಿ ಕೃಷಿ ನಡೆಸಲು ಅನುಕೂಲವಾಗಲಿದೆ ಎಂದು ಮುಖಂಡರು ಹೇಳಿದರು.

ಸಹಕಾರಿ ಬ್ಯಾಂಕ್ಗಳ ಮೂಲಕ ರೈತರಿಗೆ ಸಾಲ ಸೌಲಭ್ಯ ಕಲ್ಪಿಸುವಾಗ ಅನಗತ್ಯ ದಾಖಲೆಗಳು ಹಾಗೂ ವಿಳಂಬವನ್ನು ತಪ್ಪಿಸಬೇಕು. ಅರ್ಹ ರೈತರಿಗೆ ಕಾಲಮಿತಿಯೊಳಗೆ ಸಾಲ ಮಂಜೂರು ಮಾಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರ ಆರ್ಥಿಕ ಸ್ಥಿತಿಗತಿ ಹಾಗೂ ಪ್ರಸಕ್ತ ಕೃಷಿ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರವು ಬೆಳೆ ಸಾಲದ ಮಿತಿಯನ್ನು ಹೆಚ್ಚಿಸುವುದರ ಜೊತೆಗೆ ಬಡ್ಡಿರಹಿತ ಸಾಲ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು.

ರೈತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು, ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande