
ಬಾಗಲಕೋಟೆ, 21 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬರಗಾಲದ ಪರಿಣಾಮ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಬ್ಬಿಗೆ ಪ್ರತಿ ಟನ್ಗೆ ₹5 ಸಾವಿರ ಬೆಂಬಲ ದರ ನೀಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷ ಶ್ರೀಸಾಯಿ ರೆಡ್ಡಿ ಸರ್ಕಾರವನ್ನು ಆಗ್ರಹಿಸಿದರು.
ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಬರ ಪರಿಸ್ಥಿತಿಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆ ಕೊರತೆ, ಕೃಷಿ ಚಟುವಟಿಕೆಗಳಿಗೆ ಹೆಚ್ಚುತ್ತಿರುವ ವೆಚ್ಚ ಹಾಗೂ ಬೆಳೆಗಳ ನಿರೀಕ್ಷಿತ ಆದಾಯ ಸಿಗದಿರುವುದರಿಂದ ರೈತರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇಂತಹ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕಾಗಿದೆ ಎಂದು ಒತ್ತಾಯಿಸಿದರು.
ಕಬ್ಬು ಬೆಳೆಯಲು ರೈತರು ಹೆಚ್ಚಿನ ಪ್ರಮಾಣದಲ್ಲಿ ಹಣ, ಶ್ರಮ ಹಾಗೂ ಸಮಯವನ್ನು ವಿನಿಯೋಗಿಸುತ್ತಾರೆ. ಆದರೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕಬ್ಬಿಗೆ ಸಮರ್ಪಕ ಬೆಲೆ ದೊರೆಯದಿದ್ದರೆ ರೈತರು ಮತ್ತಷ್ಟು ಸಾಲದ ಸುಳಿಗೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಸರ್ಕಾರ ರೈತರ ಹಿತದೃಷ್ಟಿಯಿಂದ ಪ್ರತಿ ಟನ್ ಕಬ್ಬಿಗೆ ₹5 ಸಾವಿರ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀಸಾಯಿ ರೆಡ್ಡಿ ಹೇಳಿದರು.
ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರೈತರ ಬೇಡಿಕೆಗಳನ್ನು ನಿರ್ಲಕ್ಷಿಸದೆ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಕ್ಕರೆ ಕಾರ್ಖಾನೆಗಳೊಂದಿಗೆ ಚರ್ಚಿಸಿ ಕಬ್ಬಿಗೆ ಸೂಕ್ತ ದರ ನಿಗದಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ರೈತರ ಆರ್ಥಿಕ ಸಂಕಷ್ಟವನ್ನು ಪರಿಹರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ರೈತರನ್ನು ಸಂಘಟಿಸಿ ಹೋರಾಟ ನಡೆಸಲಾಗುವುದು ಎಂದು ಶ್ರೀಸಾಯಿ ರೆಡ್ಡಿ ಎಚ್ಚರಿಕೆ ನೀಡಿದರು. ರೈತರ ಹಿತಕ್ಕಾಗಿ ಅಗತ್ಯವಿದ್ದರೆ ರಾಜ್ಯವ್ಯಾಪಿ ಪ್ರತಿಭಟನೆ, ಧರಣಿ ಸೇರಿದಂತೆ ವಿವಿಧ ಹಂತದ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆ, ಬರಗಾಲದ ಪರಿಣಾಮ ಹಾಗೂ ಕೃಷಿ ಉತ್ಪಾದನಾ ವೆಚ್ಚದ ಹೆಚ್ಚಳವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ರೈತರಿಗೆ ನ್ಯಾಯಯುತ ಬೆಲೆ ಕಲ್ಪಿಸಬೇಕು. ರೈತರ ಬದುಕು ಹಾಗೂ ಕೃಷಿ ಕ್ಷೇತ್ರದ ಸ್ಥಿರತೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande