
ನವದೆಹಲಿ, 21 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದ್ದು, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಹೊಸ ತಂಡದ ಮೂಲಕ ಸ್ವತಂತ್ರವಾಗಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿದೆ.
ಈ ಹಿಂದೆ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಹೊಸ ತನಿಖಾ ತಂಡದಲ್ಲಿ ಸೇರಿಸಬಾರದು ಎಂಬ ಸೂಚನೆಯನ್ನೂನಡಲಾಗಿದೆ.2012ರ ಅಕ್ಟೋಬರ್ನಲ್ಲಿ ಉಜಿರೆಯ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆಗೆ ಒಳಗಾಗಿದ್ದರು. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ರಾಜ್ಯ ಸಿಐಡಿ ನಡೆಸಿದ್ದು, ಬಳಿಕ ಸಿಬಿಐಗೆ ವಹಿಸಲಾಗಿತ್ತು.
ಪ್ರಕರಣದಲ್ಲಿ ಬಂಧಿತರಾಗಿದ್ದ ಸಂತೋಷ್ ರಾವ್ ಅವರನ್ನು 2023ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿತ್ತು.ಸಿಬಿಐ ತನಿಖೆಯಲ್ಲಿ ಲೋಪಗಳಾಗಿದ್ದು, ಪ್ರಮುಖ ಸಾಕ್ಷ್ಯಗಳನ್ನು ಸಮರ್ಪಕವಾಗಿ ಪರಿಶೀಲಿಸಿಲ್ಲ ಎಂದು ಸೌಜನ್ಯ ಕುಟುಂಬದ ಪರವಾಗಿ ಆರೋಪಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಮರುತನಿಖೆ ಕೋರಿ ಕುಸುಮಾವತಿ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಹಿಂದಿನ ತನಿಖೆಯಲ್ಲಿನ ಕೆಲವು ಅಂಶಗಳ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆಗಳನ್ನು ಎತ್ತಿತ್ತು ಎಂದು ವರದಿಯಾಗಿದೆ. ಇದೀಗ ಹೊಸ ತನಿಖಾ ತಂಡವು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಹಾಗೂ ಹಿಂದಿನ ತನಿಖೆಯಲ್ಲಿನ ಅಂಶಗಳನ್ನು ಮರುಪರಿಶೀಲಿಸಬೇಕಿದೆ.
ಸೌಜನ್ಯ ಕುಟುಂಬದ ಪರ ವಾದ: ಹಿಂದಿನ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳನ್ನು ಕಡೆಗಣಿಸಲಾಗಿದ್ದು, ನೈಜ ಆರೋಪಿಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಸಮರ್ಪಕ ತನಿಖೆ ನಡೆದಿಲ್ಲ ಎಂದು ಕುಟುಂಬದ ಪರ ವಕೀಲರು ವಾದಿಸಿದ್ದರು.
ಸುಮಾರು 14 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ನ ಈ ಆದೇಶದಿಂದ ಹೊಸ ತನಿಖಾ ಪ್ರಕ್ರಿಯೆ ಆರಂಭವಾಗಲಿದೆ. ಮೂರು ತಿಂಗಳ ಗಡುವಿನೊಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R