



ಬಳ್ಳಾರಿ, 22 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಮುಂದಿನ ಪೀಳಿಗೆಗೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಹಾಗೂ ಆದರ್ಶಗಳನ್ನು ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅವರು ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ‘ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ’ ಹಾಗೂ ‘ಅಂಬೇಡ್ಕರ್ ಓದು ಮತ್ತು ವಿದ್ಯಾರ್ಥಿಗಳಿಂದ ಆಶುಭಾಷಣ ಸ್ಪರ್ಧೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ಕಲ್ಪಿಸುವ ಉದ್ದೇಶದಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರು ಹಗಲು-ರಾತ್ರಿ ಎನ್ನದೇ ಜ್ಞಾನಾರ್ಜನೆಯ ಮೂಲಕ ಸತತ ಪರಿಶ್ರಮದಿಂದ ಸಂವಿಧಾನ ರಚಿಸಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಮಹತ್ವವನ್ನೂ ಇದೇ ಸಂದರ್ಭದಲ್ಲಿ ಅವರು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್. ವೀರಭದ್ರಪ್ಪ ಅವರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವೈಚಾರಿಕ ಚಿಂತನೆ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ‘ಅಂಬೇಡ್ಕರ್ ಓದು’ ಕಾರ್ಯಕ್ರಮದ ನಿಮಿತ್ತ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಕುರುಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇರುದ್ರ ಸಂಡೂರು ಅವರು, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಹಾಗೂ ಆದರ್ಶಗಳನ್ನು ವಿದ್ಯಾರ್ಥಿಗಳು ಅರಿತುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಆಶುಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಸರಸ್ವತಿ ಶ್ರೀ ಪ್ರಥಮ, ಕಾರ್ತಿಕ್ ದ್ವಿತೀಯ ಹಾಗೂ ವಿದ್ಯಾಭಾರತಿ ತೃತೀಯ ಸ್ಥಾನ ಪಡೆದಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂ ಭಾಷ, ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಂಗಳಗೌರಿ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್