
ಬಾಗಲಕೋಟೆ, 22 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕ ಹಾಗೂ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ರೈತರು ಬಾಗಲಕೋಟೆ ಹೊರವಲಯದ ಶಿರೂರು ಅಗಸಿ ಸಮೀಪದ ಹೊನ್ನಾಕಟ್ಟಿ ಕ್ರಾಸ್ ಬಳಿ ಬಾಗಲಕೋಟೆ–ರಾಯಚೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಅತ್ಯಂತ ಅಗತ್ಯವಾಗಿದ್ದು, ಪದೇಪದೇ ವಿದ್ಯುತ್ ಕಡಿತ ಹಾಗೂ ಲೋಡ್ ಶೆಡ್ಡಿಂಗ್ನಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗದ ಹಿನ್ನೆಲೆಯಲ್ಲಿ ಜಮೀನುಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕ ರೈತರಲ್ಲಿ ಮೂಡಿದೆ ಎಂದು ರೈತ ಹೊನ್ನಪ್ಪ ಊಟಗಿ ಆಕ್ರೋಶ ವ್ಯಕ್ತಪಡಿಸಿದರು.
ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಕೆ ಮಾಡುವುದಾಗಿ ಅಧಿಕಾರಿಗಳು ಹಾಗೂ ಸರ್ಕಾರ ಭರವಸೆ ನೀಡಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಮುಂದುವರಿದಿದೆ ಎಂದು ರೈತರು ಆರೋಪಿಸಿದರು. ಅದರಲ್ಲೂ ಕೃಷಿ ಪಂಪ್ಸೆಟ್ಗಳಿಗೆ ಅಗತ್ಯವಿರುವ ಸಮಯದಲ್ಲಿ ವಿದ್ಯುತ್ ದೊರೆಯದಿರುವುದರಿಂದ ಬೆಳೆಗಳನ್ನು ಉಳಿಸಿಕೊಳ್ಳುವುದು ಕಷ್ಟಕರವಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
‘ಲೋಡ್ ಶೆಡ್ಡಿಂಗ್ ತಕ್ಷಣ ನಿಲ್ಲಿಸಿ, ಕೃಷಿಗೆ ಸಮರ್ಪಕ ವಿದ್ಯುತ್ ನೀಡಿ’ ಎಂದು ಘೋಷಣೆ ಕೂಗಿದ ರೈತರು, ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ರೈತರ ಪ್ರತಿಭಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿ, ವಾಹನಗಳ ಸಾಲು ಕಂಡುಬಂತು.
ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಬೇಕು. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಅವಧಿಯಲ್ಲಿ ಗುಣಮಟ್ಟದ ವಿದ್ಯುತ್ ನೀಡುವ ಮೂಲಕ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ, ವಿದ್ಯುತ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿಪಡಿಸುವ ಭರವಸೆ ನೀಡಬೇಕು ಎಂದು ರೈತರು ಒತ್ತಾಯಿಸಿದರು. ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande