
ಬಾಗಲಕೋಟೆ, 24 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ಲನಲ್ಲಿ ತೊಗರಿ ಸೇರಿದಂತೆ ವಿವಿಧ ಬೆಳೆಗಳಿಗೆ ಸಂಬಂಧಿಸಿದ ಮಧ್ಯಂತರ ಬೆಳೆವಿಮೆ ಹಾಗೂ ಬರ ಪರಿಹಾರದ ಹಣವನ್ನು ವಿಳಂಬ ಮಾಡದೆ ಕೂಡಲೇ ರೈತರ ಖಾತೆಗಳಿಗೆ ಜಮಾ ಮಾಡಬೇಕು. ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ಜೊತೆಗೆ ನೀರಾವರಿ ಹಾಗೂ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸಮಾಜದ ವತಿಯಿಂದ ನಗರದ ಕಂಠಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ರೈತರು ಪಾಲ್ಗೊಂಡು ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಗಳ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ರೈತರು ಎದುರಿಸುತ್ತಿರುವ ಬೆಳೆ ನಷ್ಟ, ಬರ ಪರಿಸ್ಥಿತಿ, ಬೆಳೆವಿಮೆ ಮತ್ತು ಪರಿಹಾರ ಹಣದ ವಿಳಂಬ, ಬೆಳೆ ಸಾಲದ ಹೊರೆ, ನೀರಾವರಿ ಕೊರತೆ ಹಾಗೂ ವಿದ್ಯುತ್ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರತಿಭಟನಾಕಾರರು ಗಮನ ಸೆಳೆದರು.
ತೊಗರಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಮಧ್ಯಂತರ ಬೆಳೆವಿಮೆ ಪರಿಹಾರ ದೊರೆಯಬೇಕಾಗಿದೆ. ಆದರೆ ಪರಿಹಾರ ಹಣದ ಬಿಡುಗಡೆ ವಿಳಂಬವಾಗುತ್ತಿರುವುದರಿಂದ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಮತ್ತಷ್ಟು ತೊಂದರೆಯಾಗುತ್ತಿದೆ ಎಂದು ರೈತ ಮುಖಂಡರು ಹೇಳಿದರು. ಬೆಳೆ ನಷ್ಟಕ್ಕೆ ಅನುಗುಣವಾಗಿ ವಿಮೆ ಹಾಗೂ ಬರ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡುವ ಮೂಲಕ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಬರ ಹಾಗೂ ಬೆಳೆ ನಷ್ಟದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ಬೇಕಾದ ಹಣಕಾಸಿನ ವ್ಯವಸ್ಥೆ ಮಾಡಿಕೊಳ್ಳುವುದು ರೈತರಿಗೆ ಕಷ್ಟಕರವಾಗಿದೆ. ಕೃಷಿ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಸಂದರ್ಭದಲ್ಲಿ ಬೆಳೆ ಕೈಕೊಟ್ಟರೆ ರೈತರು ಸಾಲದ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ರೈತರ ಮೇಲಿರುವ ಬೆಳೆ ಸಾಲದ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ ಸಮಗ್ರವಾಗಿ ಕ್ರಮ ಕೈಗೊಂಡು ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರ ಶಶಿಕಾಂತ ಬಂದರಗಲ್ಲ ಆಗ್ರಹಿಸಿದರು.
ಇದೇ ವೇಳೆ ತಾಲೂಕಿನ ನೀರಾವರಿ ಸಮಸ್ಯೆಗೂ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರೈತರು ಒತ್ತಾಯಿಸಿದರು. ಮಳೆ ಆಧಾರಿತ ಕೃಷಿಯ ಮೇಲಿನ ಅವಲಂಬನೆ ಕಡಿಮೆಯಾಗಲು ಸಮರ್ಪಕ ನೀರಾವರಿ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ. ನೀರಾವರಿ ಸೌಲಭ್ಯ ದೊರೆತರೆ ಬರದಂತಹ ಪರಿಸ್ಥಿತಿಗಳಲ್ಲಿಯೂ ರೈತರು ಕೃಷಿ ಚಟುವಟಿಕೆ ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ರೈತ ಮುಖಂಡರು ಅಭಿಪ್ರಾಯಪಟ್ಟರು.
ಕೃಷಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯಲ್ಲಿಯೂ ಸಮಸ್ಯೆಗಳು ಎದುರಾಗುತ್ತಿದ್ದು, ರೈತರಿಗೆ ಸಮರ್ಪಕ ಹಾಗೂ ನಿಯಮಿತ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಮತ್ತು ನೀರಾವರಿ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸುವ ಬದಲು ಶಾಶ್ವತ ಪರಿಹಾರಕ್ಕೆ ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆ ಬಳಿಕ ರೈತ ಮುಖಂಡರು ಹಾಗೂ ರೈತರು ತಹಸೀಲ್ದಾರ್ ಮತ್ತು ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ರೈತರ ಸಮಸ್ಯೆಗಳನ್ನು ಸಂಬಂಧಿಸಿದ ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.
ರೈತರ ಬೆಳೆವಿಮೆ ಮತ್ತು ಬರ ಪರಿಹಾರ ಬಿಡುಗಡೆ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಅರ್ಹ ಎಲ್ಲ ರೈತರಿಗೆ ಹಣ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ನೆರವು ನೀಡುವ ಮೂಲಕ ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ರೈತರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಶಶಿಕಾಂತ ಬಂಡರಗಲ್ಲ, ಬಸನಗೌಡ ಪಾಟೀಲ, ಶರಣಗೌಡ ಕಂದಕೂರ, ಬಸವರಾಜ ಹುಡೇದಮನಿ, ರಾಜಮಹ್ಮದ ನದಾಫ್, ರೈತ ಸಂಘದ ತಾಲೂಕು ಕಾರ್ಯಾಧ್ಯಕ್ಷ ಗುರು ಗಾಣಿಗೇರ, ಮಲ್ಲನಗೌಡ ತುಂಬದ, ನಿಂಗಪ್ಪ ತೋಟಗೇರಿ, ಶರಣಪ್ಪ ಮೇರಾಖೋರ, ಈರಣ್ಣ ಕುಂದರಗಿಮಠ, ತೋಟಪ್ಪ ತೋಪಲಕಟ್ಟಿ, ಮಂಜುನಾಥ ಕೊಡಗಲಿ, ದೊಡ್ಡನಗೌಡ ನಾಡಗೌಡರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ರೈತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande