ದಲಿತರ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ:ದಲಿತ ಒಕ್ಕೂಟ ಆಗ್ರಹ
ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾದಿಗ ಸೇರಿ ದಲಿತ ಸಮುದಾಯದವರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ, ಜಾತಿ ನಿಂದನೆ ಹಾಗೂ ಅಸ್ಪøಶ್ಯತೆಯ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಗೃಹ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ, ಸಮಗಾರ
ದಲಿತರ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ: ಒಕ್ಕೂಟ


ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾದಿಗ ಸೇರಿ ದಲಿತ ಸಮುದಾಯದವರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ, ಜಾತಿ ನಿಂದನೆ ಹಾಗೂ ಅಸ್ಪøಶ್ಯತೆಯ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಗೃಹ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ, ಸಮಗಾರ, ಡೋಹರ, ದಕ್ಕಲಿಗ ಮತ್ತು ಮೋಚಿಗಾರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಫಾಯಿ ಕರ್ಮಚಾರಿ ಸಂಘದ ಮಾಜಿ ಅಧ್ಯಕ್ಷ ಎಚ್. ಹನುಮಂತಪ್ಪ ಅವರು, ಕಳೆದ ಎರಡು ತಿಂಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾದಿಗ ಸೇರಿದಂತೆ ದಲಿತ ಸಮುದಾಯದವರ ಮೇಲೆ ಜಾತಿ ಆಧಾರಿತ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕನಿಷ್ಠ 10 ಗಂಭೀರ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.

ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಭೂಮಾನಂದ, ರಮೇಶ ನಕ್ಕುಂದಿ ಅವರ ಕೊಲೆ, ಈಚನಾಳದಲ್ಲಿ ಹೋಟೆಲ್ನಲ್ಲಿ ಅಸ್ಪೃಶ್ಯತೆ ಆಚರಣೆ, ಸಿರವಾರ ತಾಲ್ಲೂಕಿನ ವಕ್ರಾಣಿಯಲ್ಲಿ ಅಶ್ವಿನಿ ಛಲವಾದಿ ಅವರ ಮೇಲಿನ ಅತ್ಯಾಚಾರ ಮತ್ತು ಕೊಲೆ, ಲಿಂಗಸೂರು ತಾಲ್ಲೂಕಿನ ಕರಡಕಲ್ನಲ್ಲಿ ರೇಣಮ್ಮ (ರಾಣಿ) ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಸೇರಿದಂತೆ ಹಲವು ಪ್ರಕರಣಗಳು ನಡೆದಿವೆ ಎಂದು ಅವರು ವಿವರಿಸಿದರು.

ಅದೇ ರೀತಿ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆಯಲ್ಲಿ ಮಾದಿಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಡಜತ್ತಿಯಲ್ಲಿ 64 ವರ್ಷದ ಮಹಾದೇವಮ್ಮ ಅವರ ಕೊಲೆ, ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಊಡಗಿಯಲ್ಲಿ ಮಾದಿಗ ಯುವಕನ ಕೊಲೆ ಹಾಗೂ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಗುರುಸುಣಿಗಿ ಗುಡ್ಡದಲ್ಲಿ ದೇವಸ್ಥಾನಕ್ಕೆ ತೆರಳಿದ್ದ ಇಬ್ಬರು ಮಾದಿಗ ಯುವಕರ ಮೇಲೆ ಜಾತಿ ನಿಂದನೆ ಮತ್ತು ಹಲ್ಲೆ ನಡೆದಿದೆ ಎಂದು ಆರೋಪಿಸಿದರು.

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕಸಾಪುರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕ ಸಿಂಹಾದ್ರಿ ಹತ್ಯೆಯಾಗಿರುವುದು ಅತ್ಯಂತ ಗಂಭೀರ ಘಟನೆ ಎಂದು ಅವರು ಹೇಳಿದರು. ಈ ಎಲ್ಲ ಪ್ರಕರಣಗಳ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಿ, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಟಿ. ನರಸೀಪುರದಲ್ಲಿ ಸಮುದಾಯದ ಪರವಾಗಿ ಧ್ವನಿ ಎತ್ತುತ್ತಿರುವ ಯೂಟ್ಯೂಬರ್ ಮಂಜುನಾಥ್ ಅವರ ವಿರುದ್ಧ ದಾಖಲಾಗಿರುವ ಎಫ್ಐಆರ್ನ್ನು ಕೂಡಲೇ ಹಿಂಪಡೆಯಬೇಕು. ಸಮುದಾಯದ ಸಮಸ್ಯೆಗಳ ಕುರಿತು ಧ್ವನಿ ಎತ್ತುವವರನ್ನು ಪ್ರಕರಣಗಳ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಯಬಾರದು ಎಂದು ಹನುಮಂತಪ್ಪ ಆಗ್ರಹಿಸಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಗಂಭೀರ ಪ್ರಕರಣಗಳ ಕುರಿತು ಕೇವಲ ಹೇಳಿಕೆಗಳಿಗೆ ಸೀಮಿತವಾಗದೆ, ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ದಾಖಲಾಗಿರುವ ಪ್ರಕರಣಗಳಲ್ಲಿ ಎಷ್ಟು ಎಫ್ಐಆರ್ಗಳು ದಾಖಲಾಗಿವೆ, ಎಷ್ಟು ಪ್ರಕರಣಗಳಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯಿಸಲಾಗಿದೆ, ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ, ಎಷ್ಟು ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಹಾಗೂ ತನಿಖೆ ವಿಳಂಬವಾಗಿರುವುದಕ್ಕೆ ಕಾರಣವೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ಮೇಲ್ಕಂಡ ಪ್ರಕರಣಗಳ ತ್ವರಿತ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಕಾನೂನು ಪ್ರಕಾರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ, ಪುನರ್ವಸತಿ ಹಾಗೂ ಸಂತ್ರಸ್ತರು ಮತ್ತು ಸಾಕ್ಷಿದಾರರಿಗೆ ಪೆÇಲೀಸ್ ರಕ್ಷಣೆ ಒದಗಿಸಬೇಕು ಎಂದು ಸಂಘಟನೆಗಳ ಒಕ್ಕೂಟ ಆಗ್ರಹಿಸಿತು.

ಸುದ್ದಿಗೋಷ್ಠಿಯಲ್ಲಿ ಸುಂಕಣ್ಣ, ಅರುಣಾಚಲಂ, ಪ್ರಸಾದ್, ನರಸಪ್ಪ, ರಾಜೇಶ್, ಮಾರಣ್ಣ, ಶಿವಶಂಕರ್, ಹುಲಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande