
ಬಾಗಲಕೋಟೆ, 24 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಕೃಷಿ, ವಿದ್ಯುತ್ ಹಾಗೂ ನೀರಿನ ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವ ಬದಲು ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆರೋಪಿಸಿದರು.
ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ವತಿಯಿಂದ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬರಗಾಲದಿಂದ ಬೆಳೆ ನಷ್ಟ ಅನುಭವಿಸಿರುವ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯಲ್ಲಿಯೂ ಸಮಸ್ಯೆಗಳು ಎದುರಾಗುತ್ತಿದ್ದು, ರೈತರು ಪ್ರತಿದಿನವೂ ಅಧಿಕಾರಿಗಳ ಕಚೇರಿ ಹಾಗೂ ವಿದ್ಯುತ್ ಇಲಾಖೆಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಸಮರ್ಪಕ ವಿದ್ಯುತ್ ಪೂರೈಕೆ, ಬೆಳೆಗಳಿಗೆ ಸೂಕ್ತ ನೀರಿನ ವ್ಯವಸ್ಥೆ, ಬರ ಪರಿಹಾರ ಹಾಗೂ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವ ಮೂಲಕ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರ ರೈತರ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ. ರೈತರು ತಮ್ಮ ಹಕ್ಕುಗಳಿಗಾಗಿ ಬಂಡಾಯ ಎದ್ದರೆ ಕಾಂಗ್ರೆಸ್ ಸರ್ಕಾರ ಉಳಿಯುವುದಿಲ್ಲ ಎಂದು ವೀರಣ್ಣ ಚರಂತಿಮಠ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು, ವಿದ್ಯುತ್ ಪೂರೈಕೆಯನ್ನು ಸಮರ್ಪಕಗೊಳಿಸಬೇಕು ಹಾಗೂ ಬರ ಪರಿಸ್ಥಿತಿಯಲ್ಲಿ ರೈತರಿಗೆ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande