
ಬಾಗಲಕೋಟೆ, 24 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ :;ಬಾಗಲಕೋಟೆ ನಗರದಲ್ಲಿ ಮಳೆ ಮುಂದುವರಿದಿರುವ ನಡುವೆಯೇ ನೆಲಕ್ಕೆ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ನಗರದ ಕಿಲ್ಲಾ ಓಣಿಯ ದಾಸರ ಕಟ್ಟೆ ಸಮೀಪದ ನದಿ ದಡದ ಪಾಣಿಮಹಲ್ ಬಳಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಫಿರೋಜ್ ಅವರು ಮಾಹಿತಿ ನೀಡಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದ್ದು, ಅದನ್ನು ಗಮನಿಸದೇ ವ್ಯಕ್ತಿಯೊಬ್ಬರು ತಂತಿಯ ಸಂಪರ್ಕಕ್ಕೆ ಬಂದ ಪರಿಣಾಮ ವಿದ್ಯುತ್ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ವಿದ್ಯುತ್ ತಂತಿಗಳು ನೆಲಕ್ಕೆ ಬೀಳುವ ಸಂದರ್ಭ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ವಿಶೇಷವಾಗಿ ನೀರು ನಿಂತಿರುವ ಪ್ರದೇಶಗಳಲ್ಲಿ ವಿದ್ಯುತ್ ತಂತಿ ಬಿದ್ದಿರುವ ಸಾಧ್ಯತೆ ಇರುವುದರಿಂದ ಜನರು ಅಂತಹ ಸ್ಥಳಗಳಿಂದ ದೂರವಿರುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಹಾಗೂ ಘಟನೆಯ ನಿಖರ ಕಾರಣ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಈ ಕುರಿತು ಬಾಗಲಕೋಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಳೆಯ ಸಂದರ್ಭದಲ್ಲಿ ವಿದ್ಯುತ್ ತಂತಿಗಳು ಹಾಗೂ ಕಂಬಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ಅಪಾಯಕಾರಿ ಸ್ಥಿತಿಯಲ್ಲಿರುವ ತಂತಿಗಳನ್ನು ತಕ್ಷಣ ಸರಿಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande