ಪಶ್ಚಿಮ ಪದವೀಧರ ಮತಕ್ಷೇತ್ರ ಚುನಾವಣೆ: ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ
ಗದಗ, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾ
ಫೋಟೋ


ಗದಗ, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:- ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗವು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ-2026ಕ್ಕೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಸೆಪ್ಟೆಂಬರ್ 29ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 6ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 9ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 27ರಂದು ಮತಗಳ ಎಣಿಕೆ ನಡೆಯಲಿದ್ದು, ಅಕ್ಟೋಬರ್ 31ರಂದು ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಚುನಾವಣಾ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಚುನಾವಣಾ ಆಯೋಗದ ನಿರ್ದೇಶನಗಳು ಹಾಗೂ ಮಾದರಿ ನೀತಿ ಸಂಹಿತೆಯನ್ನು ಯಾವುದೇ ಲೋಪವಿಲ್ಲದೆ ಜಾರಿಗೊಳಿಸಬೇಕು ಎಂದು ಅವರು ಸೂಚಿಸಿದರು.

ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 22ರಿಂದಲೇ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರ ಹೊಂದಿರುವ ಬಂಟಿಂಗ್, ಬ್ಯಾನರ್, ಪೋಸ್ಟರ್ ಸೇರಿದಂತೆ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸುವ ಕಾರ್ಯವನ್ನು 24 ಗಂಟೆಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 23 ಮತದಾನ ಕೇಂದ್ರಗಳು

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್. ಮಾತನಾಡಿ, ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಗದಗ ಜಿಲ್ಲೆಯಲ್ಲಿ ಒಟ್ಟು 23 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಜಿಲ್ಲೆಯಲ್ಲಿ 12,726 ಪುರುಷರು ಹಾಗೂ 7,353 ಮಹಿಳೆಯರು ಸೇರಿದಂತೆ ಒಟ್ಟು 20,079 ಪದವೀಧರ ಮತದಾರರು ನೋಂದಾಯಿತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್ ಮಾತನಾಡಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇರುವ ಮತದಾರರನ್ನು ಪ್ರೇರೇಪಿಸಿ, ಚುನಾವಣಾ ಪ್ರಕ್ರಿಯೆಯಲ್ಲಿ ತಪ್ಪದೇ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande